Karnataka Rain Updates: ಬೆಂಗಳೂರು(ಜು.20): ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಮಲೆನಾಡು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿನ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಕಳೆದೊಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಜಿಟಿ-ಜಿಟಿ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ.
ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಜುಲೈ 19ರಿಂದ 23ರವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮನೆಗಳು ಜಲಾವೃತಗೊಂಡಿವೆ. ಮಳೆಯ ಆರ್ಭಟಕ್ಕೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ.
ಇದನ್ನೂ ಓದಿ:Bigg Boss Kannada 8: ಅರವಿಂದ್-ವೈಷ್ಣವಿ ಬಿಟ್ಟು ಉಳಿದವರೆಲ್ಲ ಆದ್ರು ನಾಮಿನೇಟ್ : ಹೊಸ ಟ್ವಿಸ್ಟ್ಗಳೊಂದಿಗೆ ವಾರದ ಆರಂಭ..!
ಭಾನುವಾರ ಕರಾವಳಿಯಲ್ಲಿ ಗರಿಷ್ಠ 10 ಸೆಂ.ಮೀ., ಉತ್ತರ ಒಳನಾಡಿನಲ್ಲಿ 6 ಸೆಂ.ಮೀ ಹಾಗೂ ಶಿವಮೊಗ್ಗದಲ್ಲಿ 8. ಸೆಂ.ಮೀ ಮಳೆಯಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡ ಇರುವ ವಿಸ್ತರಿಸಿರುವ ಪ್ರದೇಶವಿದೆ. ಹೀಗಾಗಿ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಜುಲೈ 19ರಿಂದ 23 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅದರಂತೆ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಜು.21,22 ಮತ್ತು 23ರಂದು ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಅಧಿಕ ಮಳೆಯಾಗಲಿದೆ. ಹೀಗಾಗಿ ಜು.21 ಮತ್ತು 22ರಂದು ಹಳದಿ ಅಲರ್ಟ್ನ್ನು, ಹಾಗೂ ಜು.23ರಂದು ಆರೆಂಜ್ ಅಲರ್ಟ್ನ್ನು ಘೋಷಿಸಲಾಗಿದೆ. ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಜು. 22 ಮತ್ತು 23ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ:ಭಾರತದಲ್ಲೂ ಐಸಿಸ್ ಹೆಜ್ಜೆಗುರುತು: ಉಗ್ರರನ್ನು ಬಂಧಿಸಿದ ಗುಪ್ತಚರ ದಳ
ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಜಿಟಿ ಜಿಟಿ ಮಳೆಯಾಗುತ್ತಿತ್ತು. ನಿನ್ನೆ ಮಧ್ಯಾಹ್ನ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಮುಂದಿನ ಎರಡು ದಿನಗಳ ಕಾಲ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ