Karnataka Rain: ಬೆಂಗಳೂರು (ಜೂನ್ 22): ಕರ್ನಾಟಕದಲ್ಲಿ 10 ದಿನಗಳಿಂದ ಅಬ್ಬರಿಸಿದ್ದ ಮಳೆ ಇದೀಗ ಕೊಂಚ ಕಡಿಮೆಯಾಗುತ್ತಿದೆ. ಮೂರು ದಿನಗಳಿಂದ ವರುಣನ ಆರ್ಭಟ ಕಡಿಮೆಯಾಗಿದ್ದು, ಜಲಾಶಯಗಳಿಗೆ ಹರಿದುಬರುತ್ತಿದ್ದ ನೀರಿನ ಪ್ರಮಾಣವೂ ಕಡಿಮೆಯಾಗಿದೆ. ಆದರೂ ಮಲೆನಾಡು, ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ನೆರೆಯ ರಾಜ್ಯವಾದ ಮಹಾರಾಷ್ಟ್ರದಲ್ಲಿ ಇನ್ನೂ ಮಳೆಯ ಆರ್ಭಟ ಕಡಿಮೆಯಾಗದ ಕಾರಣ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ಬೆಂಗಳೂರಿನಲ್ಲೂ ಮಳೆಯ ಅಬ್ಬರ ಕಡಿಮೆಯಾಗಿರುವುದರಿಂದ ಅನ್ಲಾಕ್ನಿಂದ ನಿಟ್ಟುಸಿರು ಬಿಟ್ಟ ಜನರ ಸಂಚಾರವೂ ಹೆಚ್ಚಾಗಿದೆ.
ಕರಾವಳಿ ತೀರದ ಜಿಲ್ಲೆಗಳಲ್ಲಿ ಸುಮಾರು 10 ದಿನಗಳಿಂದ ಮಳೆಯ ಆರ್ಭಟ ಹೆಚ್ಚಾಗಿತ್ತು. ಇದೀಗ 2 ದಿನಗಳಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದು, ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಉತ್ತರ ಕರ್ನಾಟಕದ ಕೃಷ್ಣಾ ಮತ್ತು ಘಟಪ್ರಭಾ ನದಿ ತೀರಗಳಲ್ಲಿ ನೀರಿನ ಹರಿವು ಹೆಚ್ಚಾಗಿ, ಪ್ರವಾಹ ಉಂಟಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ICAI CA Exams 2021: ಜುಲೈ ತಿಂಗಳ CA ಪರೀಕ್ಷೆ ಅಡ್ಮಿಟ್ ಕಾರ್ಡ್ ಬಿಡುಗಡೆ; ಡೌನ್ಲೋಡ್ ಮಾಡುವುದು ಹೀಗೆ...
ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮೂರು ದಿನಗಳಿಂದ ಕಡಿಮೆಯಾಗಿದೆ.
ಇಂದು ಕರ್ನಾಟಕ ಮಾತ್ರವಲ್ಲದೆ ಛತ್ತೀಸ್ಘಡ, ಸಿಕ್ಕಿಂ, ಒರಿಸ್ಸಾ, ಅರುಣಾಚಲಪ್ರದೇಶ, ಅಸ್ಸಾಂ, ಮೇಘಾಲಯ, ಮಣಿಪುರ, ನಾಗಾಲ್ಯಾಂಡ್, ತ್ರಿಪುರ, ಆಂಧ್ರಪ್ರದೇಶ, ತಮಿಳು ನಾಡಿನಲ್ಲೂ ಮಳೆಯ ಆರ್ಭಟ ಹೆಚ್ಚಾಗಿರಲಿದೆ. ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಕರ್ನಾಟಕದ ಕರಾವಳಿ ಜಿಲ್ಲೆ, ಕೇರಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ತೆಲಂಗಾಣದಲ್ಲೂ ಮಳೆ ಹೆಚ್ಚಾಗಲಿದೆ.
ಇದನ್ನೂ ಓದಿ: Fathers Day 2021: ಮಳೆಯಲ್ಲಿ ಆನ್ಲೈನ್ ಕ್ಲಾಸ್ ಕೇಳುವ ಮಗಳಿಗೆ ಅಪ್ಪನ ಕೊಡೆಯೇ ಆಸರೆ; ಸುಳ್ಯದ ತಂದೆ-ಮಗಳ ಫೋಟೋ ವೈರಲ್
ಮಳೆಯಿಂದ ಕರ್ನಾಟಕದ 20 ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಿಎಂ ಸೂಚನೆ ನೀಡಿದ್ದರು. ಇದೀಗ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿರುವುದರಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಮಳೆಯಿಂದಾಗಿ ಶರಾವತಿ, ತುಂಗಾ, ಭದ್ರಾ, ವರಾಹಿ, ವರದಾ, ಅಘನಾಶಿನಿ ನದಿಗಳು ತುಂಬಿ ಹರಿಯುತ್ತಿವೆ. ಲಿಂಗನಮಕ್ಕಿ ಜಲಾಶಯದ ಒಳಹರಿವು ಹೆಚ್ಚಾಗಿರುವುದರಿಂದ ಜೋಗ ಜಲಪಾತಕ್ಕೆ ಮತ್ತೆ ಜೀವಕಳೆ ಬಂದಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಕಡಿಮೆಯಾಗಿರುವುದರಿಂದ ಜಲಾಶಯಗಳ ಒಳಹರಿವಿನ ಪ್ರಮಾಣವೂ ಕಡಿಮೆಯಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ