Karnataka Weather Today: ರಾಜ್ಯದಲ್ಲಿ ಇನ್ನೂ 2 ದಿನ ಮಳೆ; ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಇಲ್ಲಿದೆ ಮಾಹಿತಿ

ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    Karnataka Rains Today:(ಆ.19): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ನಿನ್ನೆಯಿಂದ ಮಳೆಯ ಆರ್ಭಟ ಹೆಚ್ಚಾಗಿದೆ.  ಆಗಸ್ಟ್​ 20ರವರೆಗೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡಿನಲ್ಲೂ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಇಂದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ರಾಮನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗಲಿದೆ.

    ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕಿದೆ. ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕಳೆದ ಮೂರ್ನಾಲ್ಕು ದಿನಗಳಿಂದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮಂಗಳವಾರ ಸಂಜೆಯಿಂದ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕೂಡ ಸಿಲಿಕಾನ್​ ಸಿಟಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

    ಇದನ್ನೂ ಓದಿ:ಕುಕ್ಕೆ‌, ಧರ್ಮಸ್ಥಳ, ಕಟೀಲು: ಆಗಸ್ಟ್ 30 ರವರೆಗೆ ಸಾರ್ವಜನಿಕರಿಗೆ ಸಿಗುವುದಿಲ್ಲ ಯಾವುದೇ ಸೇವೆ

    ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೇ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ಆಗಸ್ಟ್​ 20ರವರೆಗೆ ಮಳೆ ಸುರಿಯಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ.

    ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಇನ್ನೂ 3 ದಿನ ಆರ್ಭಟ ತೋರಲಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ 7ರಿಂದ 11 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಕರ್ನಾಟಕದಲ್ಲಿ ಈಗಾಗಲೇ ವಾಡಿಕೆಗಿಂತ ಶೇ.48ರಷ್ಟು ಮಳೆ ಕಡಿಮೆಯಾಗಿದೆ.

    ಈಗಾಗಲೇ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಮಳೆಯಾಗಿದೆ. ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಭರ್ತಿಯಾಗಿದೆ. ಉತ್ತರ ಒಳನಾಡಿನಲ್ಲೂ ಇಂದು ಮಳೆಯಾಗಲಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

    ಇದನ್ನೂ ಓದಿ:Astrology: ಒಂಟಿತನ ಹೋಗಲಾಡಿಸಲು ಈ ರಾಶಿಯವರು ಹೀಗೆ ಮಾಡಿ; ಇಲ್ಲಿದೆ 12 ರಾಶಿಗಳ ದಿನಭವಿಷ್ಯ

    ಇತ್ತ ಬೆಂಗಳೂರಿನಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ. ಈ ಬಾರಿ ಕೊಡಗಿನ ಮಡಿಕೇರಿ, ವಿರಾಜಪೇಟೆ, ಸೋಮವಾರ ಪೇಟೆ ಮುಂತಾದ ಕಡೆಗಳಲ್ಲಿ ಕಳೆದ ವರ್ಷಗಳಿಗಿಂತ ದಾಖಲೆಯ ಪ್ರಮಾಣದ ಮಳೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊಡಗಿನಲ್ಲಿ ದಾಖಲೆಯ ಮಳೆಯಾಗಿದೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಉತ್ತಮವಾಗಿದ್ದು, ರೈತರ ಮೊಗದಲ್ಲಿ ಖುಷಿ ಕಾಣುತ್ತಿದೆ. ಈಗಾಗಲೇ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

    ರಾಜ್ಯ ಮಾತ್ರವಲ್ಲದೆ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇನ್ನೆರಡು ದಿನ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.

    ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದಾರೆ. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿವೆ. 342 ಟ್ರಾನ್ಸ್​ಫಾರ್ಮರ್​​​ಗಳು ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.
    Published by:Latha CG
    First published: