Karnataka Rains: ಬೆಂಗಳೂರು (ಜೂನ್ 28): ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಇಂದಿನಿಂದ ಜುಲೈ 1ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ, ಇನ್ನು 4 ದಿನಗಳ ಕಾಲ ಕರಾವಳಿಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಕೂಡ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕೂಡ ಜುಲೈ 1ರವರೆಗೆ ಭಾರೀ ಮಳೆಯಾಗಲಿದೆ. ಜುಲೈ 1ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ನಿನ್ನೆಯಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದ್ದು, ಮನೆಯೊಳಗೆ ನೀರು ನುಗ್ಗಿ ಪ್ರವಾಹದ ಸ್ಥಿತಿ ಏರ್ಪಟ್ಟಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಇಂದಿನಿಂದ 4 ದಿನ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Viral News: ಕೋವಿಡ್ ಲಸಿಕೆಗೆ ಹೆದರಿ ಹೆಂಡತಿಯ ಆಧಾರ್ ಕಾರ್ಡ್ ಹಿಡಿದು ಮರವೇರಿದ ಭೂಪ!
ಕಲ್ಯಾಣ ಕರ್ನಾಟಕದ ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ 2 ದಿನಗಳಿಂದ ಉತ್ತಮ ಮಳೆಯಾಗಿದೆ. ಇದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೊಂದರೆಗೀಡಾಗಿದ್ದಾರೆ. ರಾಯಚೂರಿನ ಮಸ್ಕಿಯ 4 ವಾರ್ಡ್ಗಳು ಸಂಪೂರ್ಣ ಜಲಾವೃತವಾಗಿವೆ. ಬೆಂಗಳೂರಿನಲ್ಲಿ ಕೂಡ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗಲಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆಯಾಗಲಿದೆ. ಆದರೆ, ಕರಾವಳಿಯಲ್ಲಿ ಇಂದಿನಿಂದ 4 ದಿನ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದಿನಿಂದ ಜುಲೈ 1ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಸಾಧಾರಣ ಮಳೆಯಾಗಲಿದೆ. ಹಾಗೇ, ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ಸಿಕ್ಕಿಂ, ನಾಗಾಲ್ಯಾಂಡ್ನಲ್ಲೂ ಇಂದು ಮಳೆಯ ಅಬ್ಬರವಿರಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ