Jal Jeevan Mission - ಕರ್ನಾಟಕದಲ್ಲಿ ಜಲಜೀವನ್ ಮಿಷನ್ ವಿಳಂಬಕ್ಕೆ ಸಚಿವ ಶೇಖಾವತ್ ಅಸಮಾಧಾನ

ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು. ಈ ಮಹತ್ವಾಕಾಂಕ್ಷಿ ಯೋಜನೆಯ ಜಾರಿ ವಿಳಂಬವಾಗಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸಿಎಂ ಮತ್ತು ಗೃಹ ಸಚಿವರೊಂದಿಗೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

ಸಿಎಂ ಮತ್ತು ಗೃಹ ಸಚಿವರೊಂದಿಗೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

  • Share this:
ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲಿಸಿದರು. ಕರ್ನಾಟಕದ ಜಲಜೀವನ್ ಮಿಷನ್ ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೇ ಪೂರ್ಣಗೊಳಿಸುವಂತೆ ಕೇಂದ್ರ ಸಚಿವರು ಸಲಹೆ ನೀಡಿದರು. ಜಲಜೀವನ್ ಮಿಷನ್ ಯೋಜನೆ ಮೂಲಕ 2024ರ ವೇಳೆಗೆ ದೇಶದ 18.93 ಕೋಟಿ ಗ್ರಾಮೀಣ ಮನೆಗಳ್ಲಲಿ 15.70 ಕೋಟಿ ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ನೀಡುವ ಗುರಿ ಹೊಂದಲಾಗಿದೆ. ಈ ಯೋಜನೆಯಡಿ ಕೇವಲ ಸೌಲಭ್ಯ ಕಲ್ಪಿಸುವುದು ಮಾತ್ರವಲ್ಲ, ನಿರಂತರವಾಗಿ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆ. ಅಂತೆಯೇ ರಾಜ್ಯದಲ್ಲಿ ಆದ್ಯತಾ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕ್ರಿಯಾತ್ಮಕ ನಳ ಸಂಪರ್ಕಗಳನ್ನು ಆದ್ಯತೆಯ ಮೇರೆಗೆ ಒದಗಿಸುವಂತೆ ಸಚಿವರು ತಿಳಿಸಿದರು. ನಳ ಸಂಪರ್ಕ ನೀಡುವುದರೊಂದಿಗೆ ಪೂರೈಸುವ ನೀರಿನ ಗುಣಮಟ್ಟವನ್ನೂ ಖಾತರಿ ಪಡಿಸುವಂತೆ ಅವರು ಸಲಹೆ ನೀಡಿದರು.

ರಾಜ್ಯದಲ್ಲಿ ಯೋಜನೆಯ ಪ್ರಗತಿಯ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು, ರಾಜ್ಯದ 91.19 ಲಕ್ಷ ಗ್ರಾಮೀಣ ಕುಟುಂಬಗಳಿಗೆ ತಲಾ 55 ಎಲ್ ಪಿ ಸಿ ಡಿ ಶುದ್ಧ ನೀರು ಒದಗಿಸುವ ಗುರಿ ಇದೆ. ಈ ಯೋಜನೆಯಡಿ 2021-22 ನೇ ಆರ್ಥಿಕ ವರ್ಷದಲ್ಲಿ 25.17 ಲಕ್ಷ ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸಲು ಉದ್ದೇಶಿಸಲಾಗಿದೆ. 2022-23 ರಲ್ಲಿ 27.15 ಲಕ್ಷ ಹಾಗೂ 2023 ಡಿಸೆಂಬರ್ ಅಂತ್ಯದ ವೇಳೆಗೆ 10.72 ಲಕ್ಷ ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ಆದ್ಯತಾ ಜಿಲ್ಲೆಗಳಾದ ರಾಯಚೂರು ಜಿಲ್ಲೆಗೆ 2000 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಯೋಜನೆ ರೂಪಿಸಲಾಗಿದ್ದು ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ಶೀಘ್ರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಯಾದಗಿರಿ ಜಿಲ್ಲೆಯಲ್ಲಿಯೂ ಬಹುಗ್ರಾಮ ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಇದನ್ನೂ ಓದಿ: Mekedatu Project| ಕರ್ನಾಟಕಕ್ಕೆ ಮೇಕೆದಾಟು ಡ್ಯಾಂ ಕಟ್ಟುವ ಹಕ್ಕಿದ್ದರೆ, ಅದನ್ನು ನಿಲ್ಲಿಸುವ ಹಕ್ಕು ನಮಗೂ ಇದೆ; ತಮಿಳುನಾಡು

ಇನ್ನು, ಯೋಜನೆ ವಿಳಂಬಕ್ಕೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಟಾರ್ಗೆಟ್ ಕೊಟ್ಟಂತೆ ಯೋಜನೆ ರೀಚ್ ಆಗದೆ ಇರುವುದಕ್ಕೆ ಸಭೆಯಲ್ಲಿ ಬೇಸರಗೊಂಡಿದ್ದಾರೆ. ಈ ವೇಳೆ ಸಿಎಂ ಯಡಿಯೂರಪ್ಪ, ಇನ್ಮುಂದೆ ರೀಚ್ ಆಗುವ ರೀತಿ ನಾವು ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ಹಿಂದಿನ ಸಭೆಯಲ್ಲಿ ಈ ಯೋಜನೆ ಕುರಿತು ಸಿಎಂ ಯಡಿಯೂರಪ್ಪ ಕೂಡ ಅಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸಿದ್ರು, ನಂತರ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ, ಕೆಲ ಜಿಲ್ಲೆಗಳಲ್ಲಿ ನೀರಿನ ಮೂಲವೇ ಇಲ್ಲ, ಜೊತೆಗೆ ಕಾಲಾವಕಾಶ ಕೂಡ ಕಡಿಮೆ ಇದೆ ಎಂದು ಸಮಾಜಾಯಿಷಿ ನೀಡಿದ್ರು.

ಒಟ್ಟಾರೆ ಜಲ ಜೀವನ ಮಿಷನ್ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಯಾಗಿದ್ದು, ರಾಜ್ಯ ಸರ್ಕಾರ ಅದನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಈಗ ಪಣ ತೊಟ್ಟಿದೆ. ಇನ್ನು, ನಿನ್ನೆಯ ಈ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವ ಜೆ. ಸಿ. ಮಾಧುಸ್ವಾಮಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

(ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.)

ವರದಿ: ಕೃಷ್ಣ ಜಿ.ವಿ.
Published by:Vijayasarthy SN
First published: