ವಿಜಯಪುರ: ಸಿಎಎ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆ ವೇಳೆ ಅಮೂಲ್ಯ ಎಂಬ ಯುವತಿ ಪಾಕಿಸ್ತಾನದ ಪರ ಘೋಷಣೆ ಹಾಕುವ ಮೂಲಕ ವಿವಾದದ ಕಿಡಿ ಎಬ್ಬಿಸಿದ್ದಾರೆ. ಇದಾದ ಮರುದಿನ ಅರುದ್ರ ಎಂಬ ಯುವತಿ ಕೂಡ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಪರ ಇರುವ ದೇಶದ್ರೋಹಿಗಳನ್ನು ಮಟ್ಟ ಹಾಕಲು ಯತ್ನಾಳ ಅವರನ್ನು ರಾಜ್ಯ ಗೃಹ ಸಚಿವರನ್ನಾಗಿ ನೇಮಕ ಮಾಡುವಂತೆ ಯತ್ನಾಳ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ.
ರಾಜ್ಯದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗುವ ಮತ್ತು ದೇಶದ್ರೋಹಿ ಚಟುವಟಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಅವರಿಗೆ ಗೃಹ ಸಚಿವ ಸ್ಥಾನ ನೀಡುವಂತೆ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
ಈ ಕುರಿತು ಟಿಕ್ ಟಾಕ್, ವಾಟ್ಸಾಪ್ ಮತ್ತು ಫೇಸ್ಬುಕ್ನಲ್ಲಿ ಅಭಿಯಾನ ಆರಂಭವಾಗಿದ್ದು, ದೇಶದ್ರೋಹಿಗಳನ್ನು ಮಟ್ಟ ಹಾಕಲು ಯತ್ನಾಳ ಅವರನ್ನು ಗೃಹ ಸಚಿವರನ್ನಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಲಾಗುತ್ತಿದೆ. ದೇಶದ್ರೋಹಿಗಳನ್ನು ಮಣಿಸಲು ಯತ್ನಾಳ ಅವರೇ ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಅವರ ಅಭಿಮಾನಿಗಳು, ಟಿಕ್ಟಾಕ್, ವಾಟ್ಸಾಪ್, ಫೇಸ್ಬುಕ್ ಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ. ಈ ಹಿಂದಿನಿಂದಲೂ ಪಾಕಿಸ್ತಾನ ಮತ್ತು ದೇಶದ್ರೋಹಿಗಳ ವಿರುದ್ಧ ತಮ್ಮದೇ ಶೈಲಿಯಲ್ಲಿ ವಾಗ್ದಾಳಿ ನಡೆಸಿ ಎಚ್ಚರಿಕೆ ನೀಡುವ ಯತ್ನಾಳ, ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಹೆಸರು ಮಾಡುತ್ತಿದ್ದಾರೆ.
ಇದನ್ನು ಓದಿ: ಪಾಕ್ ಪತ್ರಿಕೆಯಲ್ಲೂ ಸುದ್ದಿಯಾಯ್ತು ಅಮೂಲ್ಯ ಕೂಗಿದ ದೇಶದ್ರೋಹಿ ಘೋಷಣೆ
ಈಗ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಸಚಿವ ಸಂಪುಟ ಪುನಾರಚನೆ ಮಾತೂ ಕೇಳಿ ಬರುತ್ತಿದೆ. ಹೀಗಾಗಿ ಯತ್ನಾಳ ಅಭಿಮಾನಿಗಳು ಮತ್ತು ಬೆಂಬಲಿಗರು ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡಿ, ಗೃಹ ಇಲಾಖೆಯ ಜವಾಬ್ದಾರಿ ವಹಿಸಿದರೆ ಸಾಕು. ದೇಶದ್ರೋಹಿ ಚಟುವಟಿಕೆಗಳಿಗೆ ಕಡಿವಾಣ ಹಾಕಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ