ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷೆಯೊಂದಿಗೆ ಕಳೆದ ಉಪ ಚುನಾವಣೆ ಎದುರಿಸಿದ್ದ ಎಂಟಿಬಿ ನಾಗರಾಜ್ ಹಾಗೂ ಹೆಚ್. ವಿಶ್ವನಾಥ್ ಹೀನಾಯವಾಗಿ ಸೋಲನುಭವಿಸಿದ್ದರು. ಸಂಪುಟ ವಿಸ್ತರಣೆ ವೇಳೆ ಇದೇ ಕಾರಣವನ್ನು ಮುಂದಿಟ್ಟ ಮುಖ್ಯಮಂತ್ರಿ ಯಡಿಯೂರಪ್ಪ, ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡಲು ಕಾನೂನು ತೊಡಕುಗಳಿವೆ ಎಂದು ಹೇಳುವ ಮೂಲಕ ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಇಬ್ಬರಿಗೂ ಸಚಿವ ಸ್ಥಾನ ನಿರಾಕರಿಸಿದ್ದರು.
ಹೀಗಾಗಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿದ್ದರೂ ಪರವಾಗಿಲ್ಲ ಹೇಗಾದರೂ ಯಾವುದಾದರೊಂದು ಅಧಿಕಾರ ಸಿಗಲಿ ಎಂಬ ಮಹತ್ವಾಕಾಂಕ್ಷೆ ಹೊಂದಿರುವ ಎಂಟಿಬಿ ನಾಗರಾಜ್ ಮತ್ತು ವಿಶ್ವನಾಥ್ ಇದೀಗ ಹೊಸ ರಾಜಕೀಯ ಲೆಕ್ಕಾಚಾರಕ್ಕೆ ಮುಂದಾಗಿದ್ದಾರೆ. ಆ ಮೂಲಕ ಸಿಎಂ ಮೇಲೆ ಮತ್ತಷ್ಟು ಒತ್ತಡ ಹೇರಲು ಮುಂದಾಗಿದ್ದಾರೆ.
ಸೋತವರಿಗೆ ಸಚಿವ ಸ್ಥಾನ ನೀಡಲು ಯಡಿಯೂರಪ್ಪ ಕೆಲವು ಕಾನೂನು ತೊಡಕುಗಳನ್ನು ಮುಂದಿಟ್ಟಿದ್ದರು. ಹೀಗಾಗಿ ಈ ಕಾನೂನು ತೊಡಕುಗಳನ್ನು ನಿವಾರಿಸಲು ಮುಂದಾಗಿರುವ ಎಂಟಿಬಿ ನಾಗರಾಜ್, ರಾಜ್ಯದ ನಿವೃತ್ತ ನ್ಯಾಯಮೂರ್ತಿಗಳನ್ನು ಸಂಪರ್ಕಿಸಿ ಮಾಹಿತಿ ಮತ್ತು ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದಾರೆ. ಈ ಮೂಲಕ ತಾವು ಸಚಿವನಾಗಲೂ ಯಾವುದೇ ಕಾನೂನು ತೊಡಕು ಇಲ್ಲ ಎಂದು ನಿರೂಪಿಸಲು ಮುಂದಾಗಿದ್ದಾರೆ.
ಸಂಪುಟ ದರ್ಜೆಯ ಸಚಿವ ಸ್ಥಾನದ ಆಸೆಯನ್ನು ಈಗಾಗಲೇ ಕೈಬಿಟ್ಟಿರುವ ಎಂಟಿಬಿ ನಾಗರಾಜ್, ಹೇಗಾದರೂ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಅಧಿಕಾರವನ್ನು ಹಿಡಿಯಲು ತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ