ಆರ್ಆರ್ ನಗರ, ಶಿರಾ ಉಪಚುನಾವಣೆ; ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ
ಶಿರಾ ಮತ್ತು ಆರ್ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ನ. 3ರಂದು ಉಪಚುನಾವಣೆ ನಡೆಯಲಿದೆ. ನ. 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ, ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
ಆರ್ಆರ್ ನಗರ ಉಪಚುನಾವಣೆ ಅಭ್ಯರ್ಥಿಗಳಾದ ಮುನಿತ್, ಕುಸುಮಾ, ಕೃಷ್ಣಮೂರ್ತಿ
ಬೆಂಗಳೂರು (ನ. 1): ಆರ್ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಇನ್ನೆರಡು ದಿನಗಳಲ್ಲಿ ಉಪಚುನಾವಣೆ ನಡೆಯಲಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಪ್ರಚಾರ ಕಾರ್ಯ ನಡೆಸಿದ್ದಾರೆ. ಇಂದು ಸಂಜೆ 6 ಗಂಟೆಗೆ ಎರಡೂ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೂರೂ ಪಕ್ಷಗಳಲ್ಲಿ ಈಗಾಗಲೇ ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ನ. 3ರಂದು ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮುನಿರತ್ನ ಅವರಿಂದ ತೆರವಾಗಿರುವ ಆರ್ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ಕೂಡ ನ. 3ರಂದು ಉಪಚುನಾವಣೆ ಘೋಷಿಸಲಾಗಿದೆ.
ಶಿರಾ ಮತ್ತು ಆರ್ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ನ. 3ರಂದು ಉಪಚುನಾವಣೆ ನಡೆಯಲಿದೆ. ನ. 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಶಿರಾದಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ. ಚುನಾವಣಾ ಮತದಾನಕ್ಕೆ ನಿಗದಿಯಾಗಿರುವ ಗಡುವಿನ 48 ಗಂಟೆಗೆ ಮುನ್ನ ಬಹಿರಂಗ ಪ್ರಚಾರ ಮುಕ್ತಾಯಗೊಳ್ಳಲಿದೆ. ನಂತರ ಯಾವುದೇ ರಾಜಕೀಯ ಪಕ್ಷಗಳು/ ಉಮೇದುವಾರರು/ ಕಾರ್ಯಕರ್ತರು ಅಥವಾ ಇತರರು ಯಾವುದೇ ಬಹಿರಂಗ ಚುನಾವಣಾ ಪ್ರಚಾರ ನಡೆಸುವಂತಿಲ್ಲ. ಗಡುವು ಮುಕ್ತಾಯದ ನಂತರ ಬಹಿರಂಗ ಪ್ರಚಾರ ನಡೆಸಿದರೆ 2 ವರ್ಷಗಳ ಸಜೆ ಅಥವಾ ದಂಡ ಅಥವಾ ಎರಡರಿಂದಲೂ ಶಿಕ್ಷಿಸಲ್ಪಡುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಚುನಾವಣಾ ಬಹಿರಂಗ ಪ್ರಚಾರ ಮುಕ್ತಾಯವಾದ ಗಡುವಿನ ನಂತರ ಅಂದರೆ ನವೆಂಬರ್ 1 ರ ಸಂಜೆ 6 ಗಂಟೆಯ ನಂತರ ಶಿರಾ ವಿಧಾನಸಭಾ ಕ್ಷೇತ್ರದ ಮತದಾರರಲ್ಲದ ರಾಜಕೀಯ ಕಾರ್ಯಕರ್ತರು ಈ ವಿಧಾನಸಭಾ ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಚುನಾವಣಾ ನೀತಿಸಂಹಿತೆ ಪ್ರಕಾರ ಇಂದು ಸಂಜೆಯ ನಂತರ ಬಹಿರಂಗ ಪ್ರಚಾರ ನಡೆಸುವಂತಿಲ್ಲ. ಆರ್.ಆರ್ ನಗರ ವ್ಯಾಪ್ತಿಯ ಪ್ರದೇಶಗಳಲ್ಲಿ ಮದ್ಯ ಅಥವಾ ಯಾವುದೇ ಮಾದಕವಸ್ತುಗಳ ಮಾರಾಟ ಮತ್ತು ಸಂಗ್ರಹ ಮಾಡುವುದನ್ನು ನಿಷೇಧಿಸಲಾಗಿದೆ. ನ. 3ರ ಮಧ್ಯರಾತ್ರಿಯವರೆಗೆ ಆರ್ಆರ್ ನಗರದಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ.
ಆರ್.ಆರ್ ನಗರದ ಅಭ್ಯರ್ಥಿಯಾಗಿ ಇತ್ತೀಚೆಗೆ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದ ಐಎಎಸ್ ಅಧಿಕಾರಿ ದಿ. ಡಿ.ಕೆ. ರವಿ ಅವರ ಪತ್ನಿ ಕುಸುಮಾ ಸ್ಪರ್ಧಿಸಲಿದ್ದಾರೆ. ಆರ್ಆರ್ ನಗರ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಕಣಕ್ಕಿಳಿಯಲಿದ್ದಾರೆ. ಆರ್ಆರ್ ನಗರ ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಸ್ಪರ್ಧಿಸಲಿದ್ದಾರೆ.ಶಿರಾ ಕ್ಷೇತ್ರದಿಂದ ಸತ್ಯನಾರಾಯಣ ಅವರ ಹೆಂಡತಿ ಅಮ್ಮಾಜಮ್ಮ ಅವರನ್ನು ಜೆಡಿಎಸ್ ಕಣಕ್ಕಿಳಿಸಿದೆ. ಶಿರಾ ಬಿಜೆಪಿ ಅಭ್ಯರ್ಥಿಯಾಗಿ ಡಾ. ರಾಜೇಶ್ ಗೌಡ ಸ್ಪರ್ಧಿಸಲಿದ್ದಾರೆ. ಶಿರಾದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಬಿ ಜಯಚಂದ್ರ ಸ್ಪರ್ಧಿಸಲಿದ್ದಾರೆ.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ