ಬೆಂಗಳೂರು(ಜು.15): ಕೊರೋನಾ ಆತಂಕದ ನಡುವೆಯೇ ಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಸಜ್ಜಾಗಿದೆ. ಅದರಂತೆ ಜು.19 ಮತ್ತು 22ರಂದು ಪರೀಕ್ಷೆ ನಡೆಯಲಿವೆ. ಶುಲ್ಕ ಪಾವತಿಸದ ಕಾರಣ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಲು ಯಾವುದೇ ವಿದ್ಯಾರ್ಥಿಗೆ ಪ್ರವೇಶ ಪತ್ರ (ಹಾಲ್ ಟಿಕೆಟ್) ನಿರಾಕರಿಸಬಾರದೆಂದು ಶಿಕ್ಷಣ ಇಲಾಖೆ ಖಚಿತಪಡಿಸುತ್ತದೆ ಎಂದು ಪ್ರಾಥಮಿಕ ಮತ್ತ ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಬುಧವಾರ ಹೇಳಿದ್ದಾರೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಯಾವುದೇ ತೊಂದರೆಗಳನ್ನು ಎದುರಿಸದಂತೆ ಬ್ಲಾಕ್ ಶಿಕ್ಷಣ ಅಧಿಕಾರಿಗಳು(ಬಿಇಒ) ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಶುಲ್ಕ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಯಾವುದೇ ವಿದ್ಯಾರ್ಥಿಗೆ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನಿರಾಕರಿಸಲಾಗುವುದಿಲ್ಲ ಎಂದು ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿಯ (ಕೆಎಸ್ಇಇಬಿ) ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ಅವರು ಎಲ್ಲಾ ಹಾಲ್ ಟಿಕೆಟ್ಗಳನ್ನು ಜೂನ್ 29ರಂದು ಕೆಎಸ್ಇಇಬಿ ಪೋರ್ಟಲ್ಗೆ ಅಪಲೋಡ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸುವ ಸುತ್ತೋಲೆ ಹೊರಡಿಸಿದ್ದಾರೆ. ಸಂಸ್ಥೆಗಳ ಮುಖ್ಯಸ್ಥರು ಪ್ರತಿಯೊಂದು ಶಾಲೆಗೂ ಒದಗಿಸಲಾಗಿರುವ ಲಾಗಿನ್ ಕೋಡ್ ಬಳಸಿ ಅವುಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಇದನ್ನೂ ಓದಿ:PAN-Aadhaar Link: ಎಸ್ಬಿಐ ಗ್ರಾಹಕರೇ ಎಚ್ಚರ! ಪ್ಯಾನ್-ಆಧಾರ್ ಲಿಂಕ್ ಮಾಡದಿದ್ದರೆ ತೊಂದರೆ ಆಗೋದು ಗ್ಯಾರಂಟಿ...!
ವಿದ್ಯಾರ್ಥಿಗಳು ಹಾಲ್ ಟಿಕೆಟ್ ಪಡೆಯುವ ಬಗ್ಗೆ ಯಾವುದೇ ಸಮಸ್ಯೆ ಇಲ್ಲಿಯವರೆಗೆ ನಮಗೆ ವರದಿಯಾಗಿಲ್ಲ. ಆದರೆ ಕೆಲವರಿಗೆ ತಮ್ಮ ಶಾಲೆಗಳಿಂದ ಹಾಲ್ ಟಿಕೆಟ್ ನೀಡಿಲ್ಲ ಎಂಬ ವರದಿ ಕೇಳಿಬಂದ ಹಿನ್ನೆಲೆಯಲ್ಲಿ, ಪರೀಕ್ಷೆಗಳಿಗೆ ನೊಂದಾಯಿಸಿಕೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡುವಂತೆ ಬಿಇಒ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಂತಹ ಕುಂದುಕೊರತೆಗಳು ಎದುರಾದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅಥವಾ ಪೋಷಕರು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯನ್ನು ಸಂಪರ್ಕಿಸಬಹುದು. ಪರೀಕ್ಷೆಗಳಿಗೆ ಹಾಜರಾಗಲು ಬೇಕಾದ ಹಾಲ್ ಟಿಕೆಟ್ ಒದಗಿಸಲು ಅಧಿಕಾರಿಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಅವರು ಅನ್ಬುಕುಮಾರ್ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಜುಲೈ 19 ಮತ್ತು 22ರಂದು ನಡೆಯಲಿರುವ ಪರೀಕ್ಷೆಗಳಿಗೆ ಎಲ್ಲಾ ಸಿದ್ದತೆಗಳು ಈಗಾಗಲೇ ಪೂರ್ಣಗೊಂಡಿವೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಜಿಲ್ಲಾಡಳಿತ, ಶಿಕ್ಷಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ತೆಗೆದುಕೊಂಡ ಕ್ರಮಗಳನ್ನು ಪರಿಶೀಲಿಸುತ್ತಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಹೊರಡಿಸಲಾದ ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ:India vs China: ತಜಿಕಿಸ್ತಾನದಲ್ಲಿ ಚೀನಾದೊಂದಿಗೆ ಗಡಿ ವಿಚಾರ ಚರ್ಚಿಸಿದ ಹಣಕಾಸು ಸಚಿವ ಜೈಶಂಕರ್
ಮೊದಲಿಗೆ ಜು.19ರಂದು ಕೋರ್ ವಿಷಯ ಅಂದರೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಬಳಿಕ ಜು.22ರಂದು ಭಾಷಾ ವಿಷಯ ಅಂದರೆ ಕನ್ನಡ, ಇಂಗ್ಲಿಷ್, ಹಿಂದಿ ವಿಷಯಗಳಿಗೆ ಪರೀಕ್ಷೆ ಇರುತ್ತದೆ.
ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬೇರೆ ರೀತಿಯಾಗಿ ನಡೆಯಲಿದೆ. ಪ್ರಶ್ನೆ ಪತ್ರಿಕೆ ಮಾದರಿ ಬೇರೆ ರೀತಿಯಾಗಿರುತ್ತದೆ. ಅಂದರೆ ಸ್ಪರ್ಧಾತ್ಮಕ ಪರೀಕ್ಷೆ ಮಾದರಿಯಲ್ಲಿ ಇದೇ ಮೊದಲ ಬಾರಿಗೆ 10ನೇ ತರಗತಿ ಪರೀಕ್ಷೆ ನಡೆಸಲಾಗುತ್ತಿದೆ. ಬಹು ಆಯ್ಕೆ ಪ್ರಶ್ನೆಗಳ ಪ್ರಶ್ನೆ ಪತ್ರಿಕೆ ಹಾಗೂ ಒಎಮ್ಆರ್ ಶೀಟ್ ನೀಡಲಾಗುತ್ತದೆ. ವಿದ್ಯಾರ್ಥಿಗಳು ತುಂಬಾ ಜಾಗರೂಕತೆಯಿಂದ ಒಎಮ್ಆರ್ ಶೀಟ್ನ್ನು ತುಂಬಬೇಕು.
ಒಎಂಆರ್ ಶೀಟ್ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲ ನಿವಾರಿಸಲು, ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಒಎಂಆರ್ ಹಾಳೆಗಳನ್ನು ಭರ್ತಿ ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಕೊಠಡಿ ಮೇಲ್ವಿಚಾರಕರಿಗೆ ಸೂಚಿಸಲಾಗಿದೆ.ಪರೀಕ್ಷೆ ನಡೆದ 15 ದಿನಗಳಲ್ಲಿ ಫಲಿತಾಂಶ ಬರುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ