ಕಲಬುರ್ಗಿ (ಮಾರ್ಚ್ 31); ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ನಿಟ್ಟಿನಲ್ಲಿ 2019ರಲ್ಲಿ ಅಂದಿನ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಸಾಕಷ್ಟು ಕಸರತ್ತು ನಡೆಸಿದ್ದರು. ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸಂಪರ್ಕಿಸಿ ಅವರನ್ನು ಖರೀದಿಸಿ ಬಿಜೆಪಿ ಸರ್ಕಾರ ರಚಿಸಲು ಯತ್ನಿಸಿದ್ದರು. ಈ ಸಂಬಂಧ ಬಿಡುಗಡೆಯಾಗಿದ್ದ ಬಿ.ಎಸ್. ಯಡಿಯೂರಪ್ಪ ಮಾತನಾಡಿದ್ದ ಆಡಿಯೋ ಕ್ಲಿಪ್ ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನವನ್ನು ಸೃಷ್ಟಿ ಮಾಡಿತ್ತು. ತದನಂತರ ಈ ಕುರಿತ ತನಿಖೆಗೆ ತಡೆಯಾಜ್ಞೆ ತರಲಾಗಿತ್ತು. ಆದರೆ, ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ವಿರುದ್ಧದ ಅಪರೇಷನ್ ಕಮಲ ಆಡಿಯೋ ಪ್ರಕರಣದ ತನಿಖೆಗೆ ಆದೇಶ ನೀಡಿದೆ.
ತಮ್ಮ ತಂದೆಯ ಕಡೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಆಮಿಷವೊಡ್ಡಲಾಗಿತ್ತು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ಪಾಟೀಲ ಕಂದಕೂರ ರಿಂದ ಬಿ.ಎಸ್. ಯಡಿಯೂರಪ್ಪ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೆ, ಈ ಕುರಿತು ಆಡಿಯೋ ಸಹ ಬಿಡುಗಡೆಯಾಗಿತ್ತು.
2019 ರಲ್ಲಿ ಬಿ.ಎಸ್. ಯಡಿಯೂರಪ್ಪ ಆಪರೇಷನ್ ಕಮಲದ ಆಡಿಯೋ ಬಿಡುಗಡೆಯಾಗುತ್ತಿದ್ದಂತೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ, ಅಂದಿನ ಸಿಎಂ ಕುಮಾರಸ್ವಾಮಿ ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡಿರಲಿಲ್ಲ. ಆದರೆ, ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ದೂರಿನ ಮೇಲೆ ಪೊಲೀಸರು ತನಿಖೆ ಕೈಗೊಳ್ಳಲೇಬೇಕಿತ್ತು.
ಆದರೆ, ಬಿಜೆಪಿ ನಾಯಕರು ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಪ್ರಕರಣದ ತನಿಖೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ನಂತರ ಈ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ತಡೆಯಾಜ್ಞೆ ತೆರೆವುಗೊಳಿಸುವಂತೆ ಶರಣಗೌಡ ಪಾಟೀಲ ಕಂದಕೂರರಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಶರಣಗೌಡ ಕಂದಕೂರ ಪರ ಹಿರಿಯ ನ್ಯಾಯವಾದಿ ರವಿವರ್ಮ ಕುಮಾರ್ ಮತ್ತು ಪಿ.ವಿಲಾಸ್ ಕುಮಾರ್ ರಿಂದ ವಾದ ಮಂಡನೆ ಮಾಡಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ