ಕಲಬುರ್ಗಿ(ನ.01): ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಹಲವರನ್ನು ಕಲಬುರ್ಗಿಯಲ್ಲಿ ಬಂಧಿಸಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ ಪದೇ ಪದೇ ಮಲತಾಯಿ ಧೋರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ರಾಜ್ಯೋತ್ಸವ ಬಹಿಷ್ಕಾರ ಮಾಡಿ, ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದಾಗ ಹತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ಮತ್ತಿತರ ಬಂಧಿಸಲಾಗಿದೆ. ಈ ವೇಳೆ ಪೊಲೀಸರ ಬಂಧನಕ್ಕೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗ್ತಿದೆ. ಯಾವುದೇ ಪಕ್ಷದ ಸರ್ಕಾರ ಬಂದರೂ ರಾಜ್ಯ ಸರ್ಕಾರದಿಂದ ಮಲತಾಯಿ ಧೋರಣೆ ಮುಂದುವರಿದಿದೆ. ಬಿಜೆಪಿ ಸರ್ಕಾರದಲ್ಲಿ ಕಲ್ಯಾಣ ಕರ್ನಾಟಕ ಕೇಂದ್ರ ಸ್ಥಾನ ಕಲಬುರ್ಗಿಗೆ ಒಂದೂ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದರು.
ಸಂವಿಧಾನದ ಕಲಂ 371(ಜೆ) ಗೆ ತಿದ್ದುಪಡಿ ತಂದ್ರೂ ಪ್ರಯೋಜನವಾಗ್ತಿಲ್ಲ. ಈ ಭಾಗಕ್ಕೆ ಸಿಗಬೇಕಾದ ಉದ್ಯೋಗ ಮೀಸಲಾತಿಯಲ್ಲಿಯೂ ತಾರತಮ್ಯ ಮಾಡಲಾಗುತ್ತಿದೆ. ಬೇರೆ ಭಾಗದವರಿಗೆ ಆದ್ಯತೆ ನೀಡಲಾಗುತ್ತಿದೆ. ಬಡ್ತಿ ಮೀಸಲಾತಿಯಲ್ಲಿಯೂ ತಾರತಮ್ಯ ಮಾಡಲಾಗುತ್ತಿದೆ. ಈ ಭಾಗದ ಜನರ ಮೇಲೆ ಅನ್ಯಾಯದ ಮೇಲೆ ಅನ್ಯಾಯ ನಡೆಯುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದಾಗ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ತಮ್ಮ ಹೋರಾಟ ಕೈಬಿಡುವುದಿಲ್ಲ ಎಂದು ಹೋರಾಟಗಾರರು ಈ ವೇಳೆ ಎಚ್ಚರಿಕೆ ನೀಡಿದ್ದಾರೆ. ಬೀದರ್ ಜಿಲ್ಲೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆಗೂ ಸ್ಪರ್ಧೆಸುವ ಮೂಲಕ ಟಿ.ಆರ್.ಎಸ್. ಮಾದರಿಯಲ್ಲಿ ರಾಜಕೀಯ ಪಕ್ಷವನ್ನೂ ಅಸ್ತಿತ್ವಕ್ಕೆ ತರಲಾಗುವುದು. ಚುನಾವಣೆಯಲ್ಲಿ ಗೆದ್ದು ವಿಧಾನ ಸಭೆಯಲ್ಲಿಯೂ ನಮ್ಮ ಧ್ವನಿ ಎತ್ತಲಾಗುವುದು ಎಂದು ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ತಿಳಿಸಿದ್ದಾರೆ.
ಲಾಕ್ಡೌನ್ ವೇಳೆ ಕಾಂಗ್ರೆಸ್ನವರು ಜನರಿಗೆ ಒಂದು ಲೋಟ ನೀರನ್ನೂ ಕೊಟ್ಟಿಲ್ಲ; ಸಚಿವ ಎಸ್.ಟಿ.ಸೋಮಶೇಖರ್
ಕೋವಿಡ್ ಹಿನ್ನೆಲೆ ಸರಳ ರಾಜ್ಯೋತ್ಸವ
ಕಲಬುರ್ಗಿ ಜಿಲ್ಲೆಯಾದ್ಯಂತ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕಲಬುರ್ಗಿಯ ನಗರೇಶ್ವರ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ರಿಂದ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಲಬುರ್ಗಿ ಜಿಲ್ಲೆ ಕನ್ನಡದ ಮೊಟ್ಟಮೊದಲ ಉಪಲಬ್ಧ ಗ್ರಂಥ ಕವಿರಾಜ ಮಾರ್ಗ ಕಾಣಿಕೆ ನೀಡಿದ ನೆಲವಾಗಿರೋದು ನಮ್ಮೆಲ್ಲರ ಹೆಮ್ಮೆಯಾಗಿದೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ