ಬೆಂಗಳೂರು (ಮಾ. 22): ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳನ್ನು ಬಂದ್ ಮಾಡಲಾಗುವುದು. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಖಾಸಗಿ ಶಾಲೆಗಳ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ನಾಳೆ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಹೀಗಾಗಿ, ಶಿಕ್ಷಣ ಸಚಿವರ ಮನೆ ಮುಂದೆ ಬಾಯಿಗೆ ಕಪ್ಪು ಪಟ್ಟಿ ಧರಿಸಿ, ಮೌನ ಪ್ರತಿಭಟನೆ ಮಾಡಲು ನಿರ್ಧಾರ ಮಾಡಲಾಗಿದೆ.
ನಾಳೆ ನಡೆಯುವ ಪ್ರತಿಭಟನೆಯಲ್ಲಿ 10 ಸಾವಿರಕ್ಕೂ ಅಧಿಕ ಶಾಲಾ ಶಿಕ್ಷಕರು ಭಾಗಿಯಾಗಲಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ನೌಕರರ ಸಂಘ, ರುಪ್ಸಾ ಕರ್ನಾಟಕ , ಕಲ್ಯಾಣ ಕರ್ನಾಟಕ, ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಹಾಗೂ ವಿವಿಧ ಶಿಕ್ಷಕರ ಸಮನ್ವಯ ಸಮಿತಿಯಿಂದ ಹೋರಾಟ ನಡೆಸಲಾಗುವುದು.
ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳ ಬೇಡಿಕೆಗಳೇನು?:
1. ಈ ವರ್ಷದ ಶೇ.70ರಷ್ಟು ಬೋಧನಾ ಶುಲ್ಕ ಕಟ್ಟುವಂತೆ ಪೋಷಕರಿಗೆ ಸೂಚನೆ ನೀಡಬೇಕು.
2. 1995 ರಿಂದ 2005ರವರೆಗೆ ಕನ್ನಡ ಮಾಧ್ಯಮ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸಬೇಕು.
3. ಕಟ್ಟಡ ಸುರಕ್ಷತಾ ಪ್ರಮಾಣ ಪತ್ರದ ವಿಷಯದಲ್ಲಿ ಹತ್ತು ಸಾವಿರ ಶಾಲೆಗಳು ಬಂದ್ ಆಗಲಿವೆ. ಈ ವಿಚಾರದಲ್ಲಿ ಸರ್ಕಾರ ಪರಿಶೀಲಿಸುವುದು.
4. ಶಿಕ್ಷಕರ ಕಲ್ಯಾಣ ನಿಧಿಯಿಂದ ಖಾಸಗಿ ಶಾಲಾ ಶಿಕ್ಷಕರಿಗೂ ಪರಿಹಾರ ಸಿಗುವಂತೆ ಮಾಡುವುದು.
5. ಬಿಸಿಯೂಟ ಕಾರ್ಯಕ್ರಮವನ್ನು ಅನುದಾನರಹಿತ ಶಾಲಾ ಮಕ್ಕಳಿಗೂ ಯೋಜನೆ ವಿಸ್ತರಿಸಬೇಕು.
6. ಕರ್ನಾಟಕ ಖಾಸಗಿ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸಬೇಕೆಂದು ಒತ್ತಾಯಿಸಲಾಗಿದೆ.
7. ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಖಾಸಗಿ ಶಾಲಾ ಶಿಕ್ಷಕರಿಗೂ ನೀಡಬೇಕು.
1995ರ ನಂತರದ ಎಲ್ಲಾ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕೆಂದು ಆಗ್ರಹಿಸಿ ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮನೆ ಮುಂದೆ ಪ್ರತಿಭಟಿಸಲು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘ (ರೂಪ್ಸ) ನಿರ್ಧರಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ