ನವದೆಹಲಿ, ಜು. 20: 'ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ' ಎಂಬ ವಿಚಾರ ಚರ್ಚೆಯ ಮುನ್ನೆಲೆಗೆ ಬಂದ ನಂತರ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಸೃಷ್ಟಿ ಆಗಿರುವ ಕಂದಕವನ್ನು ಮುಚ್ಚಲು ಇಬ್ಬರನ್ನೂ ದೆಹಲಿಗೆ ಕರೆಸಿಕೊಂಡಿದ್ದ ಕಾಂಗ್ರೆಸ್ ಅಗ್ರ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಜೋಡೆತ್ತುಗಳಂತೆ ಕೆಲಸ ಮಾಡುವಂತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು ಬಗೆಹರಿಸಿದ ಬಳಿಕ ಕರ್ನಾಟಕ ಕಾಂಗ್ರೆಸ್ ಕಗ್ಗಂಟಿನ ಕಡೆಗೆ ಗಮನ ಹರಿಸಿರುವ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಪಂಚ ಪರಿಹಾರ ಸೂತ್ರವನ್ನು ನೀಡಿದ್ದಾರೆ ಎನ್ನಲಾಗಿದೆ.
ಅವ್ಯಾವು ಎಂದರೆ...
1) ಜೋಡೆತ್ತುಗಳಂತೆ ಕೆಲಸ ಮಾಡಿ
2) ಪಕ್ಷವನ್ನು ಅಧಿಕಾರಕ್ಕೆ ತನ್ನಿ, ಪಕ್ಷ ನಿಮಗೆ ಅಧಿಕಾರ ಕೊಡುತ್ತೆ
3) ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಎದುರಿಸಿ
4) ಬೆಂಬಲಿಗರ ಬಾಯಿಗೆ ಬೀಗ ಹಾಕಿ, ಕೈಗೆ ಕೆಲಸ ಕೊಡಿ
5) ಪಕ್ಷಕ್ಕೆ ಗೆಲ್ಲುವ ಅವಕಾಶ ಇದೆ, ಛಾನ್ಸ್ ಮಿಸ್ ಮಾಡ್ಕೊಬೇಡಿ
ಹೈಕಮಾಂಡ್ ಸೂಚನೆ ಮೇರೆಗೆ ಸೋಮವಾರವೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದೆಹಲಿಗೆ ಬಂದಿದ್ದರು. ಮಂಗಳವಾರ ಇವರ ಜೊತೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಹತ್ವದ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಕೂಡ ಉಪಸ್ಥಿತರಿದ್ದರು.
ಇಬ್ಬರನ್ನೂ ಕೂರಿಸಿಕೊಂಡು ಒಟ್ಟಾಗಿ ಕೆಲಸ ಮಾಡುವಂತೆ ಸೂಚಿಸಿದ ರಾಹುಲ್ ಗಾಂಧಿ ಅವರು ನೀವಿಬ್ಬರು ಜೊತೆಯಾಗಿ ಕೆಲಸ ಮಾಡಿ. ಪಕ್ಷ ಅಧಿಕಾರಕ್ಕೆ ಬರುವುದು ಮುಖ್ಯ. ಸದ್ಯದಲ್ಲಿ ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರಗಳಿಂದ ಜನ ಬೇಸತ್ತಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಪಕ್ಷವಾಗಿ ಕಾಂಗ್ರೆಸ್ ಜನರಲ್ಲಿ ಭರವಸೆ ಮೂಡಿಸಬೇಕು. ಆ ಕೆಲಸವನ್ನು ಮಾಡಿ. ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಹೈಕಮಾಂಡ್ ನಾಯಕರು ಮತ್ತು ಶಾಸಕರು ಸೇರಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ನಿರ್ಧರಿಸುತ್ತಾರೆ. ಈಗ ಈ ವಿಷಯ ಅಪ್ರಸ್ತುತ. ಅಪ್ರಸ್ತುತವಾದ ವಿಷಯದ ಬಗ್ಗೆ ಮಹತ್ವ ನೀಡಿ ಅವಕಾಶ ಕಳೆದುಕೊಳ್ಳಬೇಡಿ ಎಂದು ಹೇಳಿದ್ದಾರೆ ತಿಳಿದುಬಂದಿದೆ.
ಮುಂದಿನ ಮುಖ್ಯಮಂತ್ರಿ ಗೊಂದಲದ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಈಗಾಗಲೇ ಒಮ್ಮೆ ದೆಹಲಿಗೆ ಧಾವಿಸಿ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದರು. ನಂತರ 'ತಟಸ್ಥ' ಬಣದ ನಾಯಕರಾದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತು ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಕೂಡ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ದೂರು ನೀಡಿದ್ದರು.
ಇದನ್ನೂ ಓದಿ: ಕೇರಳದಲ್ಲಿಇನ್ನೂ ಒಂದು ವಾರ ಇರಲಿದೆ ಕೋವಿಡ್ ನಿರ್ಬಂಧ: ಸಿಎಂ ಪಿಣರಾಯಿ ಮಾಹಿತಿ
ಈಗ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರನ್ನೂ ದೆಹಲಿಗೆ ಕರೆಸಿಕೊಂಡು ಮಾತನಾಡುತ್ತಿದ್ದಾರೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ