HOME » NEWS » State » RAHUL GANDHI SHOULD BE CONGRESS PRESIDENT SIDDARAMAIAH AND ESHWAR KHANDRE SUPPORTS ON TWITTER SCT

ರಾಹುಲ್ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷರಾಗಬೇಕು; ಸಿದ್ದರಾಮಯ್ಯ, ಈಶ್ವರ ಖಂಡ್ರೆ ಬೆಂಬಲ

ಸೋನಿಯಾ ಗಾಂಧಿ ಮತ್ತು ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ‌ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುತ್ತಾರೆ ಎಂಬ ಸಂಪೂರ್ಣ ಭರವಸೆ ನನಗಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

news18-kannada
Updated:August 24, 2020, 8:33 AM IST
ರಾಹುಲ್ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷರಾಗಬೇಕು; ಸಿದ್ದರಾಮಯ್ಯ, ಈಶ್ವರ ಖಂಡ್ರೆ ಬೆಂಬಲ
ಸಿದ್ದರಾಮಯ್ಯ
  • Share this:
ಬೆಂಗಳೂರು (ಆ. 24): ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ. ಗಾಂಧಿ ಕುಟುಂಬದ ಹೊರತಾದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಒತ್ತಾಯವೂ ಕೇಳಿಬಂದಿದೆ. ಈಗಾಗಲೇ 23 ಕಾಂಗ್ರೆಸ್ ನಾಯಕರು ಪಕ್ಷದಲ್ಲಿ ಬದಲಾವಣೆ ತರುವಂತೆ ಆಗ್ರಹಿಸಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಇಂದು ಕಾಂಗ್ರೆಸ್​ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯೂ ನಡೆಯಲಿದ್ದು, ಇದರಲ್ಲಿ ಈ ಬಗ್ಗೆ ಅಂತಿಮ ನಿರ್ಧಾರವಾಗುವ ಸಾಧ್ಯತೆಯಿದೆ.

ಆದರೆ, ಗಾಂಧಿ ಕುಟುಂಬದವರೇ ಕಾಂಗ್ರೆಸ್​ ಅಧ್ಯಕ್ಷರಾಗಿ ಮುಂದುವರೆಯಬೇಕೆಂದು ರಾಜ್ಯ ಕಾಂಗ್ರೆಸ್​ ನಾಯಕರು ಒತ್ತಾಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ದಿನೇಶ್ ಗುಂಡೂರಾವ್ ಈಶ್ವರ ಖಂಡ್ರೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಗಾಂಧಿ ಕುಟುಂಬದವರನ್ನೇ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಸಚೈತನ್ಯ, ಕಾರ್ಯಕರ್ತರಲ್ಲಿ ಹುರುಪು ಮತ್ತು ದೇಶದ ಜನತೆಯಲ್ಲಿ ಭರವಸೆ ಮೂಡಲಿದೆ ಎಂದು ಒತ್ತಾಯಿಸಿದ್ದಾರೆ.ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಮತ್ತು ಹಿರಿಯ ನಾಯಕರ ಅನುಭವಪೂರ್ಣ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ‌ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುತ್ತಾರೆ ಎಂಬ ಸಂಪೂರ್ಣ ಭರವಸೆ ನನಗಿದೆ. ಇದು ಪಕ್ಷದ ಕೋಟ್ಯಂತರ ಕಾರ್ಯಕರ್ತರ ಆಶಯವೂ ಹೌದು ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕೂಡ ಟ್ವೀಟ್ ಮಾಡಿದ್ದು, ಸೋನಿಯಾ ಗಾಂಧಿ ಅವರ ಘನ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಅವರೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪಕ್ಷ ಮುನ್ನಡೆಸಬೇಕು ಎಂಬುದು ನನ್ನ ಮತ್ತು ಕೋಟ್ಯಂತರ ಕಾರ್ಯಕರ್ತರ ಅಭಿಲಾಷೆಯಾಗಿದೆ ಎಂದು ತಿಳಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನೇ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಬೇಕೆಂದು #MyLeaderRahulGandhi ಎಂಬ ಟ್ವಿಟ್ಟರ್​ ಅಭಿಯಾನವೂ ನಡೆಯುತ್ತಿದೆ.


ರಾಜಸ್ಥಾನದಲ್ಲಿ ಸೃಷ್ಟಿಯಾದ ರಾಜಕೀಯ ಹೈಡ್ರಾಮಾ ಒಂದು ಪಕ್ಷದಲ್ಲಿ ನಾಯಕನ ಅಗತ್ಯ ಎಷ್ಟು ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಕಾಂಗ್ರೆಸ್​ಗೆ ಅಧ್ಯಕ್ಷರ ನೇಮಕ ಮಾಡಲು ಚಿಂತಿಸಲಾಗಿದೆ. ಕಾಂಗ್ರೆಸ್​ನಲ್ಲಿ ಅಧ್ಯಕ್ಷ ಸ್ಥಾನದ ಬಗ್ಗೆ ಇನ್ನೂ ಅಂತಿಮ ನಿರ್ಧಾರಕ್ಕೆ ಬಾರದಿರಲು ರಾಹುಲ್ ಗಾಂಧಿ ಕೂಡ ಮುಖ್ಯ ಕಾರಣ ಎನ್ನಲಾಗುತ್ತಿದೆ. ಸೋನಿಯಾ ಗಾಂಧಿ ತಮ್ಮ ಮಗನನ್ನೇ ಪಕ್ಷದ ಉತ್ತರಾಧಿಕಾರಿಯನ್ನಾಗಿ ಮಾಡಲು ಹಠ ತೊಟ್ಟಿದ್ದರು. ಆದರೆ, ಅದಕ್ಕೆ ಪಕ್ಷದಲ್ಲೇ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ, ಖುದ್ದು ರಾಹುಲ್ ಗಾಂಧಿ ಕೂಡ ಈ ಬಗ್ಗೆ ಆಸಕ್ತಿ ತಳೆದಿಲ್ಲ.

ಇದನ್ನೂ ಓದಿ: ಇಂದು ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆ - ಗಾಂಧಿ ಕುಟುಂಬ ಹೊರತಾದ ಎಐಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ

ಕೆಲವು ದಿನಗಳ ಹಿಂದಷ್ಟೇ ಸಂದರ್ಶನವೊಂದರಲ್ಲಿ ಕಾಂಗ್ರೆಸ್​ ಅಧ್ಯಕ್ಷ ಸ್ಥಾನದ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದ ಪ್ರಿಯಾಂಕಾ ಗಾಂಧಿ ಕೂಡ ಗಾಂಧಿ ಕುಟುಂಬದವರು ಅಧ್ಯಕ್ಷರಾಗುವುದಿಲ್ಲ. ಈ ವಿಷಯದಲ್ಲಿ ನಾನು ರಾಹುಲ್ ಗಾಂಧಿ ಅಭಿಪ್ರಾಯಕ್ಕೆ ಸಹಮತ ವ್ಯಕ್ತಪಡಿಸುತ್ತೇನೆ ಎಂದಿದ್ದರು. ನಮ್ಮ ಕುಟುಂಬ ಯಾರೊಬ್ಬರೂ ಕಾಂಗ್ರೆಸ್​ ಪಕ್ಷಕ್ಕೆ ಅಧ್ಯಕ್ಷರಾಗುವುದಿಲ್ಲ ಎಂದು ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಅದಕ್ಕೆ ನನ್ನ ಸಂಪೂರ್ಣ ಸಹಮತವಿದೆ. ಕಾಂಗ್ರೆಸ್ ಪಕ್ಷ ತನ್ನದೇ ದಾರಿಯಲ್ಲಿ ಸಾಗಬೇಕು. ಅದಕ್ಕೆ ನಮ್ಮ ಕುಟುಂಬಕ್ಕೆ ಸೇರಿರದ ವ್ಯಕ್ತಿ ಅಧ್ಯಕ್ಷರಾಗಬೇಕು ಎಂದು ನನಗೆ ಅನಿಸುತ್ತದೆ ಎಂದು ಕೂಡ ಪ್ರಿಯಾಂಕಾ ಗಾಂಧಿ ಅಭಿಪ್ರಾಯಪಟ್ಟಿದ್ದರು.
Youtube Video

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನ್ನು ಅನುಭವಿಸಿದ ನಂತರ ಆ ಸೋಲಿನ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅಧಿಕಾರ ವಹಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ನೇಮಕ ಆಗುವವರೆಗೂ ಸೋನಿಯಾ ಗಾಂಧಿಯವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಸ್ಪಷ್ಟಪಡಿಸಿತ್ತು. ಇಂದು ನಡೆಯಲಿರುವ ಸಿಡಬ್ಲುಸಿ ಸಭೆಯಲ್ಲಿ ಕಾಂಗ್ರೆಸ್ ಉತ್ತರಾಧಿಕಾರಿಯ ಬಗ್ಗೆ ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ.
Published by: Sushma Chakre
First published: August 24, 2020, 8:32 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories