ಬೆಂಗಳೂರು; ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮುನಿರತ್ನ ಅವರಿಂದ ತೆರವಾಗಿರುವ ಆರ್ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ನ. 3ರಂದು ನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಗೆಲುವಿಗಾಗಿ ಸಕಲ ರೀತಿಯಲ್ಲೂ ಸರ್ಕಸ್ ಮಾಡಿದ್ದ ಮೂರು ಪಕ್ಷಗಳಲ್ಲಿ ಮತದಾರ ಯಾರ ಕೈ ಹಿಡಿದಿದ್ದಾನೆ ಎನ್ನುವುದು ಇಂದು ಮಧ್ಯಾಹ್ನದೊಳಗೆ ತಿಳಿದುಬರಲಿದೆ.
ಶಿರಾದಲ್ಲಿ ಕಾಂಗ್ರೆಸ್ನಿಂದ ಟಿ.ಬಿ ಜಯಚಂದ್ರ, ಬಿಜೆಪಿಯಿಂದ ರಾಜೇಶ್ ಗೌಡ ಹಾಗೂ ಜೆಡಿಎಸ್ ನ ಅಮ್ಮಾಜಮ್ಮ ಅಭ್ಯರ್ಥಿಗಳಾಗಿದ್ದಾರೆ. ಆರ್ಆರ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಕುಸುಮಾ, ಬಿಜೆಪಿಯಿಂದ ಮುನಿರತ್ನ ಹಾಗೂ ಜೆಡಿಎಸ್ನಿಂದ ಕೃಷ್ಣಮೂರ್ತಿ ಸ್ಪರ್ಧೆಗೆ ಇಳಿದಿದ್ದಾರೆ.
ಮತದಾನದ ಬಳಿಕ ಪ್ರಕಟವಾಗಿರುವ ಮತದಾನೋತ್ತರ ಸಮೀಕ್ಷೆಗಳಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ದಾಖಲಿಸಿದೆ ಎಂದು. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಗೆಲುವು ನಮ್ಮದೇ ಎಂಬ ವಿಶ್ವಾಸದಲ್ಲಿದ್ದಾರೆ. ಈ ಕ್ಷೇತ್ರಗಳ ಯಾರ ಪಾಲಾಗಲಿವೆ ಎಂಬುದು ಇನ್ನು ಕೆಲವೇ ಗಂಟೆಗಳಲ್ಲಿ ತಿಳಿದುಬರಲಿದೆ.
ಈ ಫಲಿತಾಂಶ ಬಿಜೆಪಿ ಸರ್ಕಾರದ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ. ಆದರೆ, ನಾಯಕತ್ವ ಬದಲಾವಣೆ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈಗಾಗಲೇ ಬಿಜೆಪಿಯಲ್ಲಿ ಆಂತರಿಕ ಕಲಹ ಎದ್ದಿರುವುದು ತಿಳಿಯದ ಸಂಗತಿಯೇನಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಒಳಗೊಳಗೆ ಮಸಲತ್ತುಗಳನ್ನು ನಡೆಯುತ್ತಿವೆ. ಅದಕ್ಕಾಗಿ ಸಮಯವನ್ನು ಕಾಯುತ್ತಿದ್ದಾರೆ. ಅದಕ್ಕೆ ತಕ್ಕಂತೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಫಲಿತಾಂಶದ ಬಳಿಕ ಯಡಿಯೂರಪ್ಪ ಬದಲಾವಣೆ ನಿಶ್ಚಿತ ಎಂದು ಹೇಳಿದ್ದಾರೆ. ಹಾಗೊಂದು ವೇಳೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಪರಾಭವಗೊಂಡರೆ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗೆ ಇಳಿಯಬೇಕಾಗಿ ಬರಬಹುದು. ಇಲ್ಲ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದರೆ ಸಿಎಂ ಸ್ಥಾನ ಬಿಎಸ್ವೈ ಅವರಿಗೆ ಅಬಾಧಿತವಾಗಿರಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ