ಬೆಂಗಳೂರು (ನ. 10): ಕರ್ನಾಟಕದ ಆರ್ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ಆರ್ಆರ್ ನಗರದಲ್ಲಿ ಗೆಲುವು ಸಾಧಿಸಲು ಇನ್ನಿಲ್ಲದ ಪ್ರಯತ್ನ ನಡೆಸಲಾಗಿತ್ತು. ಈಗಾಗಲೇ ಆರ್ಆರ್ ನಗರದಲ್ಲಿ ನಾಲ್ಕು ಸುತ್ತಿನ ಮತ ಎಣಿಕೆ ಮುಗಿದಿದ್ದು, ಬಿಜೆಪಿಯ ಅಭ್ಯರ್ಥಿ ಮುನಿರತ್ನ ಭಾರೀ ಮುನ್ನಡೆ ಸಾಧಿಸಿದ್ದಾರೆ. ಇದರಿಂದ ಗೆಲುವಿನ ಕನಸು ಕಂಡಿದ್ದ ಡಿಕೆ ರವಿ ಪತ್ನಿ ಕುಸುಮಾಗೆ ಆರಂಭದಲ್ಲೇ ಹಿನ್ನಡೆ ಉಂಟಾಗಿದೆ.
ಆರ್ಆರ್ ನಗರದಲ್ಲಿ ಮುನಿರತ್ನ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಈಗಿನಿಂದಲೇ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ನಾಲ್ಕನೇ ಸುತ್ತಿನಲ್ಲಿ ಮುನಿರತ್ನ 6,400 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 2,45 ಮತಗಳನ್ನು ಪಡೆದು 2ನೇ ಸ್ಥಾನದಲ್ಲಿ ಮತ್ತು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಮೂರನೇ ಸ್ಥಾನದಲ್ಲಿದ್ದಾರೆ. ನಾಲ್ಕು ಸುತ್ತಿನ ಮತ ಎಣಿಕೆಯಲ್ಲಿ ಮುನಿರತ್ನ ಒಟ್ಟು 11,630 ಮತಗಳನ್ನು ಪಡೆದಿದ್ದು, 6 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಅಂಚೆ ಮತ ಎಣಿಕೆಯಲ್ಲೂ ಮುನಿರತ್ನ ಮೊದಲ ಸ್ಥಾನ ಕಾಯ್ದುಕೊಂಡಿದ್ದಾರೆ.
ಆರ್ ಆರ್ ನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಹೆಚ್ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ವಿ. ಕೃಷ್ಣಮೂರ್ತಿ ಸ್ಪರ್ಧಿಸಿದ್ದರು. ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ. ರಾಜೇಶ್ ಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಸ್ಪರ್ಧಿಸಿದ್ದರು.
ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಶಿರಾ ವಿಧಾನಸಭಾ ಕ್ಷೇತ್ರ ಹಾಗೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮುನಿರತ್ನ ಅವರಿಂದ ತೆರವಾಗಿದ್ದ ಆರ್ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ನ. 3ರಂದು ಉಪಚುನಾವಣೆ ನಡೆದಿತ್ತು. ಅದರ ಫಲಿತಾಂಶ ಇಂದು ಪ್ರಕಟವಾಗಲಿದೆ.
ಇಂದು ಬೆಳಗ್ಗೆ 8 ಗಂಟೆಯಿಂದ ಆರ್ಆರ್ ನಗರದಲ್ಲಿ ಮತ ಎಣಿಕೆ ಆರಂಭವಾಗಿದೆ. ಮಾಜಿ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಹೆಂಡತಿ ಕುಸುಮಾ ಕೆಲವು ದಿನಗಳ ಹಿಂದಷ್ಟೇ ಕಾಂಗ್ರೆಸ್ಗೆ ಸೇರ್ಪಡೆಯಾಗಿ, ಆರ್ಆರ್ ನಗರದ ಉಪ ಚುನಾವಣಾ ಟಿಕೆಟ್ ಪಡೆದಿದ್ದರು. ಕಾಂಗ್ರೆಸ್ಗೆ ರಾಜೀನಾಮೆ ನೀಡಿ, ಬಿಜೆಪಿ ಸೇರಿರುವ ಮುನಿರತ್ನ ಅವರಿಗೂ ಈ ಚುನಾವಣೆ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಹಾಗೇ, ಜೆಡಿಎಸ್ ಕೂಡ ತಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ಅವರನ್ನು ಗೆಲ್ಲಿಸಲು ಸಾಕತ್ತು ಕಸರತ್ತುಗಳನ್ನು ನಡೆಸಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ