news18-kannada Updated:July 26, 2020, 3:03 PM IST
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್
ಬೆಂಗಳೂರು(ಜು.26): ರಾಜ್ಯ ಕಾಂಗ್ರೆಸ್ನಿಂದ ನಾಳೆ ರಾಜಭವನ ಎದುರು ಪ್ರತಿಭಟನೆ ನಡೆಯಲಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿಯವರು ರಾಜ್ಯ ಕಾಂಗ್ರೆಸ್ಗೆ ಪ್ರತಿಭಟನೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ನಾಳೆ ಮಧ್ಯಾಹ್ನ 1.30ಕ್ಕೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರು ತೀರ್ಮಾನ ಮಾಡಿದ್ದಾರೆ.
ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಸುತ್ತಿರುವ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಪ್ರತಭಟನೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ‘ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ’ ಎಂಬ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ.
ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳಿಸಿ ಅಧಿಕಾರಕ್ಕೆ ಬರುವಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರು ಯಶಸ್ವಿಯಾಗಿದ್ದರು. ಈಗ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ. ಈ ಪ್ರತಿಭಟನೆಗೆ ಈ ಅಂಶವೂ ಕಾರಣ ಎಂದೇಳಲಾಗುತ್ತಿದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈ ವಿಚಾರಗಳನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಮಾಡುವಂತೆ ಪಕ್ಷದ ನಾಯಕರಿಗೆ ಕರೆ ನೀಡಿದ್ದಾರೆ. ಆಯಾ ರಾಜ್ಯಗಳ ರಾಜ್ಯಪಾಲರ ಕಚೇರಿ ಮುಂಭಾಗ ಪ್ರತಿಭಟನೆ ಮಾಡವಂತೆ ಸೂಚನೆ ಕೊಟ್ಟಿದ್ದಾರೆ.
ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಪಾಲರ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ರಾಜ್ಯ ದ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಡಿ.ಕೆ ಶಿವಕುಮಾರ್ ಪತ್ರ ಬರದಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪ ಸಿಎಂ ಆಗಿ 1 ವರ್ಷ; ಸವಾಲುಗಳೇನು? ಸಾಧನೆ, ವೈಫಲ್ಯಗಳೇನು? ಇಲ್ಲಿದೆ ಪಟ್ಟಿ’ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ’ ಹೆಸರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಯಲಿದೆ. ರಾಜ್ಯಪಾಲರ ಕಚೇರಿ ಎದುರು ನಡೆಯಲಿರುವ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ನ ಶಾಸಕರು ಸೇರಿದಂತೆ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಈಶ್ವರ್ ಖಂಡ್ರೆ, ಡಾ. ಜಿ ಪರಮೇಶ್ವರ್, ಸೌಮ್ಯ ರಾಮಲಿಂಗಾ ರೆಡ್ಡಿ, ಪ್ರಿಯಾಂಕಾ ಖರ್ಗೆ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ಧಾರೆ.
Published by:
Ganesh Nachikethu
First published:
July 26, 2020, 3:02 PM IST