ನವದೆಹಲಿ(ಡಿಸೆಂಬರ್. 16): ಮಾಜಿ ಸಚಿವ ರೋಷನ್ ಬೇಗ್ ಮತ್ತವರ ಕುಟುಂಬದ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಬುಧವಾರ ಸುಪ್ರೀಂ ಕೋರ್ಟ್ ನೊಟೀಸ್ ನೀಡಿದೆ. ತಮ್ಮ ವಿರುದ್ಧದ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರೋಷನ್ ಬೇಗ್ ಸುಪ್ರೀಂ ಕೋರ್ಟ್ ಮೆಟ್ಟಿಲು ತುಳಿದಿದ್ದರು. ಮಂಗಳವಾರ ರೋಷನ್ ಬೇಗ್ ಅವರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಸಂಜಯ್ ಕಿಶನ್ ನೇತೃತ್ವದ ತ್ರಿಸದಸ್ಯ ಪೀಠವು ಬುಧವಾರ ವಿಸ್ತೃತ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು. ಬುಧವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನೊಟೀಸ್ ನೀಡಿದೆ. ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರೋಷನ್ ಬೇಗ್ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ಹಿನ್ನೆಲೆ ಮಾಜಿ ಸಚಿವ ರೋಷನ್ ಬೇಗ್ ಮತ್ತವರ ಕುಟುಂಬದವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ರದ್ದುಗೊಳಿಸುವಂತೆ ರೋಷನ್ ಬೇಗ್ ಮತ್ತವರ ಕುಟುಂಬಸ್ಥರು ರಾಜ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ರಾಜ್ಯ ಹೈಕೋರ್ಟ್ ಇವರ ಅರ್ಜಿಯನ್ನು ವಜಾಗೊಳಿಸಿತ್ತು.
ರೋಷನ್ ಬೇಗ್, ಹೆಂಡತಿ ಸಬೀಹಾ ರೋಷನ್ ಹಾಗೂ ಮಗ ರುಮಾನ್ ಬೇಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟಿನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿತಲ್ಲದೆ ರೋಷನ್ ಬೇಗ್ ಮಾಜಿ ಸಚಿವರಾಗಿರುವ ಕಾರಣ ಅವರ ವಿರುದ್ಧ ವಿಚಾರಣೆ ಮುಂದುವರೆಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಹೇಳಿತ್ತು.
ಇನ್ನೊಂದೆಡೆ ರೋಷನ್ ಬೇಗ್ ಮತ್ತು ಅವರ ಕುಟುಂಬದ ಸದಸ್ಯರು ಅಕ್ರಮ ಆಸ್ತಿ ಹೊಂದಿದ್ದಾರೆಂದು ಆರೋಪಿಸಿ ಸಲ್ಲಿಕೆಯಾಗಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ರೋಷನ್ ಬೇಗ್ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು. ರೋಷನ್ ಬೇಗ್ ಮತ್ತವರ ಕುಟುಂಬದವರು ಶೇಕಡಾ 10ರಷ್ಟು ಮಾತ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆಂದು ಬಿ ರಿಪೋರ್ಟಿನಲ್ಲಿ ತಿಳಿಸಲಾಗಿತ್ತು. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಅನ್ನು ತಿರಸ್ಕರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.
ರಾಜ್ಯ ಹೈಕೋರ್ಟ್ ಕೂಡ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ ವಿಚಾರಣೆ ನಡೆಸುತ್ತಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಸರಿಯಾಗಿದೆ ಎಂದು ತನ್ನ ಆದೇಶದಲ್ಲಿ ಹೇಳಿತ್ತು. ಹಾಗಾಗಿ ಈ ರೋಷನ್ ಬೇಗ್ ಸುಪ್ರೀಂ ಕೋರ್ಟ್ ಮೆಟ್ಟಿಲು ತುಳಿದಿದ್ದಾರೆ.
ಇದನ್ನೂ ಓದಿ : ಅನ್ನದಾತರ ಪರ ಹೆಜ್ಜೆ ಇಟ್ಟ ಕೇಂದ್ರ ಸರ್ಕಾರ ; ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ
ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರೋಷನ್ ಬೇಗ್ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ರೋಷನ್ ಬೇಗ್ ವಿರುದ್ಧ 2012ರಲ್ಲಿ ಅಬ್ದುಲ್ ಹಕ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನನ್ವಯ ಪ್ರಕರಣ ದಾಖಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ