RR Nagar Bypolls: ಆರ್​ಆರ್​ ನಗರ ಉಪಚುನಾವಣೆಗೆ ಸುಪ್ರೀಂ ಕೋರ್ಟ್​ ಅನುಮತಿ; ಮುನಿರತ್ನಗೆ ಬಿಗ್ ರಿಲೀಫ್​

RR Nagar Bypolls: ಮುನಿರತ್ನ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಅರ್ಜಿ ಸಲ್ಲಿಸಿದ್ದ ತುಳಸಿ ಮುನಿರಾಜು ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ. ಈ ಮೂಲಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಸರ್ವೋಚ್ಚ ನ್ಯಾಯಾಲಯ

ಸರ್ವೋಚ್ಚ ನ್ಯಾಯಾಲಯ

  • Share this:
ಬೆಂಗಳೂರು (ಅ. 13): ಆರ್​.ಆರ್​. ನಗರ ಮತ್ತು ಶಿರಾ ವಿಧಾನಸಭಾ ಉಪಚುನಾವಣೆಗೆ ಈಗಾಗಲೇ ಮೂರೂ ಪಕ್ಷಗಳು ಭಾರೀ ಸಿದ್ಧತೆ ನಡೆಸಿವೆ. ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿದ್ದು, ಬಿಜೆಪಿ ಮತ್ತು ಜೆಡಿಎಸ್​ನಲ್ಲಿ ಆರ್​ಆರ್​ ನಗರದ ಚುನಾವಣಾ ಸ್ಪರ್ಧಿಯ ಬಗೆಗಿನ ಗೊಂದಲ ಇನ್ನೂ ಬಗೆಹರಿದಿಲ್ಲ. ಈ ನಡುವೆ ಆರ್​ಆರ್​ ನಗರ ಕ್ಷೇತ್ರದ ಉಪಚುನಾವಣೆ ನಡೆಯುತ್ತಾ? ಇಲ್ಲವಾ? ಎಂಬ ಗೊಂದಲಕ್ಕೆ ಇಂದು ತೆರೆಬಿದ್ದಿದೆ. ಮುನಿರತ್ನ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಅರ್ಜಿ ಸಲ್ಲಿಸಿದ್ದ ತುಳಸಿ ಮುನಿರಾಜು ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ. ಈ ಮೂಲಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದ ಮುನಿರತ್ನ ಅವರಿಂದ ತೆರವಾಗಿರುವ ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರಗಳಿಗೆ ನ. 3ರಂದು ಉಪಚುನಾವಣೆ ಘೋಷಿಸಲಾಗಿದೆ. ಆರ್​.ಆರ್ ನಗರದ ಅಭ್ಯರ್ಥಿಯಾಗಿ ಇತ್ತೀಚೆಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದ ಐಎಎಸ್​ ಅಧಿಕಾರಿ ದಿ. ಡಿ.ಕೆ. ರವಿ ಅವರ ಪತ್ನಿ ಕುಸುಮಾ ಸ್ಪರ್ಧಿಸಲಿದ್ದಾರೆ. ಬಿಜೆಪಿಯಿಂದ ಮುನಿರತ್ನ ಸ್ಪರ್ಧಿಸುತ್ತಾರಾ? ಅಥವಾ ತುಳಸಿ ಮುನಿರಾಜು ಗೌಡ ಸ್ಪರ್ಧಿಸುತ್ತಾರಾ? ಎಂಬ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಮುನಿರತ್ನ ಆರ್​ಆರ್​ ನಗರದಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದ್ದಾರೆ. ಇಂದು ಬೆಳಗ್ಗೆ ಕೂಡ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದ್ದ ಮುನಿರತ್ನ ಹಿರಿಯ ನಾಯಕರನ್ನು ಭೇಟಿಯಾಗಿದ್ದರು.

ಆರ್​ಆರ್​ ನಗರದಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುನಿರತ್ನ ಗೆಲುವು ಸಾಧಿಸಿದ್ದರು. ಆದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ತುಳಸಿ ಮುನಿರಾಜು ಗೌಡ ಆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ಬಳಿಕ ಆಪರೇಷನ್ ಕಮಲಕ್ಕೆ ಒಳಗಾದ ಮುನಿರತ್ನ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಆದರೆ, 2018ರ ಚುನಾವಣಾ ಅಕ್ರಮದ ವಿಚಾರಣೆ ಇನ್ನೂ ನ್ಯಾಯಾಲಯದಲ್ಲಿ ನಡೆಯುತ್ತಿದ್ದುದರಿಂದ ಮುನಿರತ್ನ ಅವರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿರಲಿಲ್ಲ.

ಆ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿರುವ ಸುಪ್ರೀಂ ಕೋರ್ಟ್​ ಉಪಚುನಾವಣೆ ನಡೆಸಲು ಅನುಮತಿ ನೀಡಿದೆ. ಈ ಮೂಲಕ ತುಳಸಿ ಮುನಿರಾಜು ಗೌಡ ಅವರಿಗೆ ಸುಪ್ರೀಂ ಕೋರ್ಟ್​ನಲ್ಲೂ ಭಾರೀ ಹಿನ್ನಡೆಯಾಗಿದೆ. ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್​ ಆರ್​ಆರ್​ ನಗರ ಉಪಚುನಾವಣೆಗೆ ಅನುಮತಿ ನೀಡಿದೆ.
Published by:Sushma Chakre
First published: