ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಅಶಿಸ್ತು ಪ್ರದರ್ಶಿಸುವವರ ವಿರುದ್ಧ ಶಿಸ್ತುಕ್ರಮ; ನಳಿನ್ ಕುಮಾರ್ ಕಟೀಲ್
ರಾಜ್ಯದಲ್ಲಿ ಪ್ರಸ್ತುತ ಸಿಎಂ ಬದಲಾವಣೆ ಇಲ್ಲ. ಬಿ.ಎಸ್. ಯಡಿಯೂರಪ್ಪನವರೇ ಮುಂದಿನ ಮೂರು ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಚಿತಪಡಿಸಿದ್ದಾರೆ.
ಬೆಂಗಳೂರು (ಅಕ್ಟೋಬರ್ 21); ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ದಿನದಿಂದ ಒಂದಲ್ಲಾ ಒಂದು ರೀತಿಯಲ್ಲಿ ಬಿಜಾಪುರ ಬಿಜೆಪಿ ಶಾಸಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧವಾಗಿ ನೇರಾನೇರ ವಾಗ್ದಾಳಿ ನಡೆಸುತ್ತಲೇ ಬಂದಿದ್ದಾರೆ. ಸೋಮವಾರ ರಾತ್ರಿ ಸಹ ಸಿಎಂ ಯಡಿಯೂರಪ್ಪ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದ ಯತ್ನಾಳ್, "ಬಿಎಸ್ವೈ ಹೆಚ್ಚು ದಿನ ಅಧಿಕಾರಿದಲ್ಲಿ ಮುಂದುವರೆಯುವುದಿಲ್ಲ" ಎಂದು ವಾಗ್ದಾಳಿ ನಡೆಸುವ ಮೂಲಕ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ, ಇಂದು ಸಹ ಸಾಮಾಜಿಕ ಜಾಲತಾಣದಲ್ಲಿ ಬಿಎಸ್ವೈ ವಿರುದ್ಧ ಕಿಡಿಕಾರಿದ್ದಾರೆ. ಈ ವಿಚಾರ ಬಿಜೆಪಿ ನಾಯಕರಿಗೆ ಇರಿಸು ಮುರಿಸಿಗೆ ಕಾರಣವಾಗಿದ್ದು, ಈ ಕುರಿತು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, "ಅಶಿಸ್ತು ಪ್ರದರ್ಶಿಸುವವರ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ" ಎಂದು ಯತ್ನಾಳ್ ಅವರಿಗೆ ನೇರಾನೇರ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಯಡಿಯೂರಪ್ಪ ಮತ್ತು ಯತ್ನಾಳ್ ಜಟಾಪಟಿ ಇದೀಗ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಇದರ ಬೆನ್ನಿಗೆ ನಿನ್ನೆ ಬಾಗಲಕೋಟೆಯಲ್ಲಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾನು ಮತ್ತೊಂದು ಅವಧಿಗೆ ಸಿಎಂ ಆಗುವ ಕನಸನ್ನು ವ್ಯಕ್ತಪಡಿಸಿದ್ದರು. ಮಾಜಿ ಸಚಿವ ಜಮೀರ್ ಅಹ್ಮದ್ ಸಹ ಈ ವಿಚಾರವನ್ನು ಬೆಂಬಲಿಸಿದ್ದರು.
ಈ ಎಲ್ಲಾ ಬೆಳವಣಿಗಳ ಬೆನ್ನಿಗೆ ಇಂದು ಟ್ವೀಟ್ ಮೂಲಕ ಕೆಲವು ವಿಚಾರಗಳ ಕುರಿತು ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, "ರಾಜ್ಯದಲ್ಲಿ ಪ್ರಸ್ತುತ ಸಿಎಂ ಬದಲಾವಣೆ ಇಲ್ಲ. ಬಿ.ಎಸ್. ಯಡಿಯೂರಪ್ಪನವರೇ ಮುಂದಿನ ಮೂರು ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಯಲಿದ್ದಾರೆ" ಎಂದು ಖಚಿತಪಡಿಸಿದ್ದಾರೆ.
ಅಲ್ಲದೆ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿರುವ ಕಟೀಲ್, "ಬಿಜೆಪಿ ಪಕ್ಷ ಅಶಿಸ್ತನ್ನು ಸಹಿಸುವುದಿಲ್ಲ. ಅಶಿಸ್ತು ಪ್ರದರ್ಶಿಸುವವರ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ" ಎಂದು ಹೇಳುವ ಮೂಲಕ ಯತ್ನಾಳ್ ಅವರಿಗೆ ನೇರಾನೇರ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಈ ಹಿಂದೆ ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯದ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದ ಸಂದರ್ಭದಲ್ಲೂ ಯತ್ನಾಳ್ ಕಿಡಿಕಾರಿದ್ದರು. "ಕಟೀಲ್ ಅವರಿಗೆ ಉತ್ತರಕರ್ನಾಟಕದ ಬಗ್ಗೆ ಏನೂ ಗೊತ್ತಿಲ್ಲ, ಇನ್ನೂ ಇಲ್ಲಿನ ಜನರಿಗೂ ಸಹ ಅವರು ಯಾರೆಂದೆ ಗೊತ್ತಿಲ್ಲ. ಅವರು ಇಲ್ಲಿ ಬಂದು ಏನು ಮಾಡಿಯಾರು? ಅವರ ಮಾತನ್ನು ಇಲ್ಲಿನ ಯಾವ ಕಾರ್ಯಕರ್ತನೂ ಕೇಳಲಾರ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ