ದಕ್ಷಿಣ ಕನ್ನಡ: ರಾಜ್ಯಾದ್ಯಂತ ಪೂರ್ವ ಮುಂಗಾರು (Pre Monsoon) ಮಳೆ (Rain) ಅಬ್ಬರ ಮುಂದುವರೆದಿದೆ. ಕರಾವಳಿ (Coastal) ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು (Malenadu) ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಇತ್ತ ರಾಜಧಾನಿ ಬೆಂಗಳೂರು, ಹಾಸನ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಭಾರೀ ಮಳೆಯ ಕಾರಣದಿಂದ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ (School) ರಜೆ (Holiday) ಘೋಷಿಸಿ, ಆಯಾ ಜಿಲ್ಲಾಧಿಕಾರಿಗಳು (DC) ಆದೇಶ ಮಾಡಿದ್ದಾರೆ. ಅದರಂತೆ ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ
ಎಡೆ ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕರ್ನಾಟಕದ ಕರಾವಳಿ ಭಾಗ ತತ್ತರಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆ ಇಂದು ಒಂದು ದಿನದ ಮಟ್ಟಿಗೆ ದಕ್ಷಿಣ: ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ರಜೆ ಘೋಷಿಸಿ ದಕ್ಷಿಣ ಕನ್ನಡ ಡಿಸಿ ಆದೇಶ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಶಾಲೆಗಳಿಗೆ ರಜೆ ನೀಡುವ ಬಗ್ಗೆ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಇದನ್ನೂ ಓದಿ: Heavy Rain: ಕೊಡಗಿನಲ್ಲಿ ಭಾರೀ ಮಳೆ! ಮನೆಗಳಿಗೆ ನೀರು, 15 ಡಿಗ್ರಿಗೆ ಇಳಿದ ತಾಪಮಾನ
ಮೈಸೂರಿನಲ್ಲಿ ಶಾಲೆಗಳಿಗೆ ಬಿಡುವು
ಮೈಸೂರು ಜಿಲ್ಲೆಯಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಗುರುವಾರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಚಂದ್ರಕಾಂತ ಆದೇಶ ಹೊರಡಿಸಿದ್ದಾರೆ.
ಮಂಡ್ಯದಲ್ಲಿ ಶಾಲೆಗಳಿಗೆ ರಜೆ
ಇನ್ನು ಮಂಡ್ಯ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಅಂಗನವಾಡಿಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗದಲ್ಲಿ ಭಾರೀ ಮಳೆ
ಶಿವಮೊಗ್ಗ ತಾಲ್ಲೂಕಿನಾದ್ಯಂತ ಅತಿಯಾದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಪರ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬಿಇಒ ಅವರು ರಜೆ ಘೋಷಿಸಿದ್ದಾರೆ. ಇನ್ನು ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ
ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಉತ್ತಮ ಮಳೆಯಾಗಲಿದ್ದು, ಗುರುವಾರ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ರೆಡ್ ಅಲರ್ಟ್ ಘೋಷಿಸಿದ್ದರೆ, ಬಳಿಕ ಮೂರು ದಿನಗಳ ಕಾಲ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಇರಲಿದೆ.
ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ
ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಯಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಲ್ಲೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Rainfall: ವರುಣನ ಅಬ್ಬರಕ್ಕೆ ತತ್ತರಿಸಿದ ಹಾಸನ; ಗೋಡೆ ಕುಸಿದು ಓರ್ವ ಸಾವು, ಮನೆಗಳಿಗೆ ನುಗ್ಗಿದ ನೀರು
ತುಮಕೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ