ಬೆಂಗಳೂರು(ಆ.26): ಹೆಚ್ಚಿನ ಆರ್ಥಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ಎಲ್ಲಾ ಕ್ಷೇತ್ರಗಳಲ್ಲಿ ವಿದೇಶಿ ಕಂಪನಿಗಳ ನೇರ ಹೂಡಿಕೆಯನ್ನು ರಾಜ್ಯ ಸರ್ಕಾರ ಉತ್ತೇಜಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಬುಧವಾರ ಆಯೋಜಿಸಿದ್ದ ಇಂಡೋ-ಜಪಾನಿಸ್ ಬಿಸಿನೆಸ್ ಫೋರಂನಲ್ಲಿ ಪಾಲ್ಗೊಂಡು ಮಾತನಾಡಿದ ವೇಳೆ ಯಡಿಯೂರಪ್ಪ ಹೀಗೆ ಹೇಳಿದರು.
ಜಪಾನಿನ ಕಂಪನಿಗಳಿಂದ ನೇರ ಹೂಡಿಕೆಗೆ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದರು. ಅಲ್ಲದೆ, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳೇನು ಎಂಬುದನ್ನು ಜಪಾನಿ ನಿಯೋಗಕ್ಕೆ ಮನವರಿಕೆ ಮಾಡಿಕೊಟ್ಟರು.
ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಮತ್ತು ಜಪಾನ್ ನಡುವಿನ ಔದ್ಯಮಿಕ ಸಂಬಂಧ ಉತ್ತಮವಾಗಿದೆ. ವಿಶೇಷವಾಗಿ, ಜಪಾನ್‌ಗೆ ಸಂಬಂಧಿಸಿದಂತೆ ತುಮಕೂರಿನ ವಸಂತನರಸಪುರದಲ್ಲಿ ಜಪಾನೀಸ್ ಕೈಗಾರಿಕಾ ಟೌನ್‌ಶಿಪ್ ಸ್ಥಾಪಿಸಲಾಗಿದೆ. ಇದಲ್ಲದೇ ಜಪಾನಿ ಕಂಪನಿಗಳ ಸಹಯೋಗದೊಂದಿಗೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸಲಾಗಿದೆ. ಜಪಾನಿ ಕೈಗಾರಿಕಾ ಟೌನ್‌ಶಿಪ್‌ಗೆ 519.55 ಎಕರೆ ಭೂಮಿ ಮೀಸಲಿಡಲಾಗಿದ್ದು, ರಸ್ತೆ, ವಿದ್ಯುತ್ ಮತ್ತು ನೀರು ಸರಬರಾಜಿನಂತಹ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಈ ಟೌನ್‌ಶಿಪ್‌ನಲ್ಲಿ ಹೆವಿ ಎಂಜಿನಿಯರಿಂಗ್, ಯಂತ್ರೋಪಕರಣ, ಆಟೋಮೋಟಿವ್ ಮತ್ತು ಏರೋಸ್ಪೇಸ್ ಘಟಕಗಳಿಗೆ ಆದ್ಯತೆ ನೀಡಲಾಗಿದೆ," ಎಂದು ತಿಳಿಸಿದರು.
ಐಟಿ / ಐಟಿಇಎಸ್, ಯಂತ್ರೋಪಕರಣಗಳು, ವಾಹನಗಳು, ಏರೋಸ್ಪೇಸ್ ಸೇರಿದಂತೆ ರಾಜ್ಯದಲ್ಲಿ ಲಭ್ಯವಿರುವ ಪ್ರಾಥಮಿಕ ಮತ್ತು ತೃತೀಯ ವಲಯದ ಉದ್ದಿಮೆ ಅವಕಾಶಗಳ ಬಗ್ಗೆ ವಿವರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, "ದೇಶದ ಹೂಡಿಕೆದಾರರು ಕರ್ನಾಟಕಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದಾರೆ. ಇತ್ತೀಚೆಗೆ ವಿದೇಶಿ ಉದ್ಯಮಿಗಳೂ ರಾಜ್ಯದ ಬಗ್ಗೆ ಒಲವು ತೋರಿಸುತ್ತಿದ್ದಾರೆ. 2020ರ ಮಾರ್ಚ್‌ಗೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ವಿದೇಶಿ ನೇರ ಹೂಡಿಕೆಯಲ್ಲಿ ನಾವು ಎರಡನೇ ಸ್ಥಾನದಲ್ಲಿದ್ದೇವೆ", ಎಂದರು.
"ಹೆಚ್ಚಿನ ಸಂಖ್ಯೆಯ ಸ್ಟಾರ್ಟ್‌ಅಪ್‌ಗಳಿಗೆ ರಾಜ್ಯ ನೆಲೆಯಾಗಿದ್ದು, ಉದಯೋನ್ಮುಖ ಉದ್ಯಮಿಗಳಿಗೆ ಪೂರಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವಲ್ಲಿ ಅತ್ಯುತ್ತಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹಲವು ಕ್ಷೇತ್ರಗಳಲ್ಲಿ ಗಮನಾರ್ಹ ಬೆಳವಣಿಗೆ ಸಾಧಿಸಿರುವ ಕರ್ನಾಟಕ, ಉದ್ಯಮ ಸ್ನೇಹಿ ಆಡಳಿತದ ಜತೆಗೆ ಕೈಗಾರಿಕೆಗಳಿಗೆ ಪೂರಕವಾದ ನೀತಿ ರೂಪಿಸುವ ಮೂಲಕ ಉತ್ತಮ ವ್ಯವಸ್ಥೆ ನಿರ್ಮಿಸಿದೆ,"ಎಂದರು.
"ದೇಶದ ಆಕರ್ಷಕ ಹೂಡಿಕೆ ತಾಣವಾಗಿರುವ ಕರ್ನಾಟಕ, ಕೈಗಾರಿಕೆಯಲ್ಲಿ ಮುಂದುವರಿದ ರಾಜ್ಯಗಳಲ್ಲಿ ಒಂದು. ಸುಮಾರು ಸುಮಾರು 250 ಶತಕೋಟಿ ಡಾಲರ್ ಆರ್ಥಿಕತೆಯ ರಾಜ್ಯ, 9.6% ದರದಲ್ಲಿ ಪ್ರಗತಿ ಕಾಣುತ್ತಿದೆ. ಹಲವಾರು ಕ್ಷೇತ್ರಗಳಲ್ಲಿ ಮುಂಚೂಣಿ ಸಾಧಿಸಿದೆ. ಯಂತ್ರೋಪಕರಣಗಳು, ಬೃಹತ್ ಯಂತ್ರೋಪಕರಣಗಳು, ವಾಹನಗಳು, ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್ ಮತ್ತು ಡಿಫೆನ್ಸ್, ಜೈವಿಕ ತಂತ್ರಜ್ಞಾನದಂತಹ ವ್ಯಾಪಕ ಶ್ರೇಣಿಯ ಕೈಗಾರಿಕೆಗಳಲ್ಲಿ ರಾಜ್ಯ ಬಹಳ ಹಿಂದಿನಿಂದಲೂ ಪ್ರಾಬಲ್ಯ ಹೊಂದಿದೆ. ಫಾರ್ಚೂನ್ 500 ಕಂಪನಿಗಳ ಪೈಕಿ 400 ಕಂಪನಿಗಳು, ಸುಮಾರು 400 ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರಗಳಿಗೆ (ದೇಶದ ಒಟ್ಟು ಸಂಸ್ಥೆಗಳ ಪೈಕಿ ಶೇ. 44) ಬೆಂಗಳೂರು ನೆಲೆಯಾಗಿದೆ,"ಎಂದು ತಿಳಿಸಿದರು.
“ಶಾಲೆಗಳು, ಮನರಂಜನೆ, ಮೆಟ್ರೋ ರೈಲು, ಅಂತಾರಾಷ್ಟ್ರೀಯ ವಿಮಾನಯಾನ ಮತ್ತು ಸಾಮಾಜಿಕ ಕೂಟಗಳನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆರ್ಥಿಕ ಚಟುವಟಿಕೆಗಳನ್ನು ಬೆಂಬಲಿಸುವ ಮೂಲಕ ಆರ್ಥಿಕ ಪುನಶ್ಚೇತನಗೊಳಿಸಲು ರಾಜ್ಯ ಹಲವಾರು ಕ್ರಮಗಳನ್ನ ಕೈಗೊಂಡಿದೆ. ನೀತಿ ಆಯೋಗ ಬಿಡುಗಡೆ ಮಾಡುವ ಹೊಸ ಆವಿಷ್ಕಾರಗಳ ಸೂಚಿ 2019ರ ಪಟ್ಟಿಯಲ್ಲಿ ನಮ್ಮ ರಾಜ್ಯ ಅಗ್ರ ಸ್ಥಾನ ಪಡೆದಿದೆ. ನುರಿತ ಮಾನವ ಸಂಪನ್ಮೂಲ ಲಭ್ಯತೆ, ಹೆಸರಾಂತ ಉನ್ನತ ಶಿಕ್ಷಣ ಸಂಸ್ಥೆಗಳು, ಪ್ರಮುಖ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು, ಉತ್ತಮ ಆಡಳಿತ ಹಾಗೂ ಹೂಡಿಕೆಗೆ ಪೂರಕ ವಾತಾವರಣದಿಂದಾಗಿ ರಾಜ್ಯ ಅಗ್ರ ಸ್ಥಾನ ಪಡೆಯಲು ಸಾಧ್ಯವಾಗಿದೆ,"ಎಂದು ವಿವರಿಸಿದರು.
ಹೂಡಿಕೆದಾರರ ಹಿತವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ಪರಿಚಯಿಸಿರುವ ಹೊಸ ಕೈಗಾರಿಕಾ ನೀತಿ 2020-2025, ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಸಲು ನೆರವಾಗಲಿದೆ. ಮುಂಗಾಣ್ಕೆಯ ಈ ಕೈಗಾರಿಕಾ ನೀತಿಯು ಉದ್ದಿಮೆಗೆ ಪೂರಕವಾದ ಭತ್ಯೆ ಸೇರಿದಂತೆ ಭೂ ಲಭ್ಯತೆ, ಕಾರ್ಮಿಕ ಕಾನೂನಿನ ಸುಧಾರಣೆ ಹಲವು ನಿಯಂತ್ರಕ ಸುಧಾರಣೆಗಳನ್ನು ತಂದಿದೆ. ಆರ್ಥಿಕ ಮತ್ತು ಕೈಗಾರಿಕಾ ಅಭಿವೃದ್ಧಿಯನ್ನು ಉತ್ತೇಜಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆ," ಎಂದು ಅವರು ಹೇಳಿದರು.
"ನಾನಾ ಕ್ಷೇತ್ರಗಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡಲು ಬದ್ಧವಾಗಿರುವ ರಾಜ್ಯ ಸರ್ಕಾರ ಸುಲಲಿತ ವ್ಯವಹಾರಕ್ಕೆ ಒತ್ತು ನೀಡುತ್ತದೆ. ಕೈಗಾರಿಕಾ ಸೌಲಭ್ಯ ಕಾಯ್ದೆ (2002)ಕ್ಕೆ ತಿದ್ದುಪಡಿ ತರುವ ಮೂಲಕ ಕೈಗಾರಿಕಾ ಸ್ಥಾಪನೆಗಾಗಿ ಕೈಗಾರಿಕೋದ್ಯಮಿಗಳು ವಿವಿಧ ಇಲಾಖೆಗಳಿಗೆ ಅಲೆದಾಡಬೇಕಾದ ಪ್ರಮೇಯವಿಲ್ಲ. ಬದಲಿಗೆ ಜಿಲ್ಲಾ ಸಮಿತಿ ಹಾಗೂ ರಾಜ್ಯ ಸಮಿತಿಗಳಿಂದ ಕೈಗಾರಿಕಾ ಸ್ಥಾಪನೆಗೆ ಅನುಮತಿ ಸಿಕ್ಕ ಕೂಡಲೇ ಕಾಮಗಾರಿ ಆರಂಭ ಮಾಡಿ, ಮೂರು ವರ್ಷಗಳ ಕಾಲಾವಕಾಶದಲ್ಲಿ ಇತರ ಎಲ್ಲಾ ಅನುಮತಿಗಳನ್ನು ಪಡೆದುಕೊಳ್ಳಲು ಈ ತಿದ್ದುಪಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ,"ಎಂದರು.
ಇದನ್ನೂ ಓದಿ: ರಾಯಚೂರು: ಕೊರೋನಾ ರೋಗಿಗಳಿಗೆ ಆತ್ಮಸ್ಥೈರ್ಯ ಹೆಚ್ಚಿಸಲು ಕೊವಿಡ್ ಕೇರ್ ಸೆಂಟರ್ನಲ್ಲಿ ಯೋಗ ಪಾಠ
ರಾಜ್ಯದ ಆರ್ಥಿಕ ಪ್ರಗತಿ ಮತ್ತು ಕೈಗಾರಿಕೆಗಳ ಅಭಿವೃದ್ಧಿ ನಮ್ಮ ಸರ್ಕಾರದ ಪ್ರಮುಖ ಆದ್ಯತೆ. ಏರೋಸ್ಪೇಸ್, ಎಲೆಕ್ಟ್ರಿಕ್ ವೆಹಿಕಲ್ಸ್, ಎಲೆಕ್ಟ್ರಾನಿಕ್ಸ್, ಜವಳಿ, ಕೃಷಿ, ಐಟಿ ಮತ್ತು ಜೈವಿಕ ತಂತ್ರಜ್ಞಾನದಂತಹ ಕ್ಷೇತ್ರಗಳನ್ನು ಉತ್ತೇಜಿಸಲು ನಿರ್ದಿಷ್ಟ ನೀತಿ ರೂಪಿಸಲಾಗಿದೆ. ಹೂಡಿಕೆಗೆ ಸೂಕ್ತ ತಾಣವಾಗಿರುವ ಕರ್ನಾಟಕಕ್ಕೆ ಜಪಾನಿನ ಕಂಪನಿಗಳನ್ನು ಆಹ್ವಾನಿಸುತ್ತೇವೆ. ಈ ನಿಟ್ಟಿನಲ್ಲಿ ಎಲ್ಲ ಸೌಲಭ್ಯ ಒದಗಿಸಲು ನಾವು ಬದ್ಧ. ಕರ್ನಾಟಕ ಮತ್ತು ಜಪಾನ್ ಪರಸ್ಪರ ಲಾಭದಾಯಕ ಆರ್ಥಿಕ ಸಹಭಾಗಿತ್ವವನ್ನು ಹೊಂದುವ ವಿಶ್ವಾಸ ನನಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ