ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ರಾಜ್ಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಂಗಳವಾರ ರಾಜ್ಯ ಸಚಿವ ಸಂಪುಟದಲ್ಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಇಬ್ಬರು ಸಚಿವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಸೋಡಿಯಾ ಅಬಕಾರಿ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜೈಲು ಸೇರಿದ್ದಾರೆ.
ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಈ ಇಬ್ಬರು ಸಚಿವರ ರಾಜೀನಾಮೆಗೆ ಬಿಜೆಪಿಯಿಂದ ನಿರಂತರ ಬೇಡಿಕೆ ಇತ್ತು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಇಬ್ಬರು ಬಂಧಿತ ಸಚಿವರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರನ್ನು ಸಂಪುಟದಿಂದ ತಕ್ಷಣವೇ ತೆಗೆದುಹಾಕಬೇಕು ಎಂದು ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ರಾಮ್‌ವೀರ್ ಸಿಂಗ್ ಬಿಧುರಿ ಸೋಮವಾರ ಒತ್ತಾಯಿಸಿದ ನಂತರ ಈ ಘೋಷಣೆ ಹೊರಬಿದ್ದಿದೆ.
ಸಿಬಿಐನಿಂದ ಬಂಧಿತರಾಗಿರುವ ಸಿಸೋಡಿಯಾ ಅವರು 18 ಸಚಿವಾಲಯಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದರು. ಪ್ರಮುಖವಾಗಿ ಶಿಕ್ಷಣ, ಹಣಕಾಸು, ಯೋಜನೆ, ಭೂಮಿ ಮತ್ತು ಕಟ್ಟಡ, ಸೇವೆಗಳು, ಪ್ರವಾಸೋದ್ಯಮ, ಕಲೆ-ಸಂಸ್ಕೃತಿ ಮತ್ತು ಭಾಷೆ, ಜಾಗೃತಿ, ಕಾರ್ಮಿಕ ಮತ್ತು ಉದ್ಯೋಗ, ಆರೋಗ್ಯ, ಕೈಗಾರಿಕೆ, ವಿದ್ಯುತ್, ಗೃಹ, ನಗರಾಭಿವೃದ್ಧಿ, ನೀರಾವರಿ ಜೊತೆಗೆ ಲೋಕೋಪಯೋಗಿ ಇಲಾಖೆಯನ್ನು ಹೊಂದಿದ್ದಾರೆ.